Home ಜಿಲ್ಲೆ ಬೆಂಗಳೂರು ಹೊರಟ್ಟಿ ರಾಜೀನಾಮೆ

ಹೊರಟ್ಟಿ ರಾಜೀನಾಮೆ

ಬೆಂಗಳೂರು, ಆ. ೭- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ್ದಾರೆ.


ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರ ಮನವೊಲಿಕೆ ನಂತರ ಬಸವರಾಜು ಹೊರಟ್ಟಿಯವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.


ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪತ್ರವನ್ನು ಅವರು ರವಾನಿಸಿದ್ದು, ಸ್ವಇಚ್ಛೆಯಿಂದ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ರವರನ್ನು ಆಯ್ಕೆ ಮಾಡಿದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ರಾಜಕೀಯ ಬೆಳವಣಿಗೆಗಳು ನಡೆದಿದ್ದವು.


ಸಭಾಪತಿ ಸ್ಥಾನಕ್ಕೆ ನಾನು ರಾಜೀನಾಮೆ ಕೊಡಲ್ಲ, ಬೇಕಾದರೆ ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರಿಂದ ನೂತನ ಸಭಾಪತಿ ಆಯ್ಕೆ ಜಟಿಲ ಎನಿಸಿತ್ತು.


ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸಭಾಪತಿ ಹೊರಟ್ಟಿಯವರನ್ನು ಭೇಟಿ ಮಾಡಿ ಚರ್ಚಿಸಿ ಅವರ ಮನವೊಲಿಸಿದ್ದರು.
ಇದಾದ ಬಳಿಕ ಇಂದು ಬಸವರಾಜ ಹೊರಟ್ಟಿಯವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿ ಚರ್ಚಿಸಿದ್ದರು.


ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಮನವೊಲಿಕೆ ನಂತರ ಕೊನೆಗೂ ಹೊರಟಿಯವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದು, ಸಭಾಪತಿ ಸ್ಥಾನ ಹಾಗೂ ಉಪಸಭಾಪತಿ ಎರಡು ಸ್ಥಾನಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ನಿರ್ಧರಿಸಿತ್ತು.


ಅದರಂತೆ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ರವರನ್ನು, ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀಯವರನ್ನು ಆಯ್ಕೆ ಮಾಡಲಾಗಿತ್ತು.
ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆಗೆ ಕಾಂಗ್ರೆಸ್ ಮುಂದಾಗಿತ್ತು.


ಈ ಹಿಂದೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲದಿಂದ ಸಭಾಪತಿಯಾಗಿ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿಯವರಿಗೆ ರಾಜೀನಾಮೆ ನೀಡುವಂತೆ ನಾಲ್ಕೈದು ದಿನಗಳ ಹಿಂದೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದರು. ಆದರೆ ಅವರು ರಾಜೀನಾಮೆ ಕೊಡಲು ಹಿಂದೇಟು ಹಾಕಿ, ರಾಜೀನಾಮೆ ಕೊಡಲ್ಲ, ಅವಿಶ್ವಾಸ ನಿರ್ಣಯ ಮಂಡಿಸಿ ಎಂದು ಸವಾಲು ಹಾಕಿದ್ದರು. ಇದು ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆಯನ್ನು ಮತ್ತಷ್ಟು ಜಟಿಲಗೊಳಿಸಿತ್ತು.


ಸಭಾಪತಿ ಹೊರಟ್ಟಿಯವರ ಹೇಳಿಕೆಯ ನಂತರ ಅವರ ಮನವೊಲಿಸುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ನಡೆಸಿದ್ದರು.
ಅದರಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರು ಸಭಾಪತಿ ಬಸವರಾಜ ಹೊರಟ್ಟಿಯವರ ಮನವೊಲಿಸಿ ರಾಜೀನಾಮೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಸವರಾಜ ಹೊರಟ್ಟಿಯವರ ರಾಜೀನಾಮೆಯಿಂದ ತೆರವಾಗಿರುವ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಸಲೀಂ ಅಹಮದ್ ಆಯ್ಕೆಯಾಗಲಿದ್ದು, ಉಪಸಭಾಪತಿಯಾಗಿದ್ದ ಪ್ರಾಣೇಶ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಿಯುಕ್ತಿಗೊಳ್ಳಲಿದ್ದಾರೆ.