
ಯಾದಗಿರಿ,ಫೆ.22: ಜಿಲ್ಲೆಯ ಶಹಾಪುರ ತಾಲೂಕು ವ್ಯಾಪ್ತಿಯ ದೋರನಹಳ್ಳಿ ಹೊಸ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತವು ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಮತ್ತು ಮಣ್ಣು ಸಾಗಣೆ ಮಾಡುತ್ತಿದ್ದ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಭ್ಯವಾದ ಮಾಹಿತಿಯಂತೆ, ಮೂವರು ಯುವಕರು ಒಂದೇ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟೋ ಪ್ರಮಾಣದಲ್ಲಿತ್ತೆಂದರೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಬ್ಬ ಯುವಕನ ಕಾಲು ತೊಡೆಯಿಂದ ಸಂಪೂರ್ಣವಾಗಿ ಕತ್ತರಿಸಿ ಹೊರಬಿದ್ದಿರುವುದು ಘಟನೆ ಭೀಕರತೆಯನ್ನು ಸ್ಪಷ್ಟಪಡಿಸಿದೆ. ಘಟನೆ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದು ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಶಹಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಈಶ್ವರ (ಶಹಾಪುರ) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ದೃಢಪಡಿಸಿವೆ.
ಕನಕ (ಕಕ್ಕೇರಿ),ಮಹೇಶ್ (ದೊಡ್ಡಗೇರ)ಗಾಯಗೊಂಡಿದ್ದಾರೆ.
ಇವರಲ್ಲಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತೊಬ್ಬರು ಶಹಾಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೆÇಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಚಾಲಕ ಹಾಗೂ ವಾಹನದ ಮಾಲೀಕತ್ವದ ಬಗ್ಗೆ ತನಿಖೆ ಮುಂದುವರಿದಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಸ್ಥಳೀಯರು ಅತಿವೇಗ, ನಿರ್ಲಕ್ಷ್ಯ ಚಾಲನೆ ಹಾಗೂ ನಿಯಂತ್ರಣ ರಹಿತ ಮರಳು ಸಾಗಾಣಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ದೋರನಹಳ್ಳಿ ಭಾಗದಲ್ಲಿ ನಿರಂತರವಾಗಿ ಟಿಪ್ಪರ್ ವಾಹನಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆ ತಕ್ಷಣವೇ ಕಟ್ಟುನಿಟ್ಟಿನ ನಿಗಾ, ವೇಗ ನಿಯಂತ್ರಣ ಕ್ರಮಗಳು ಹಾಗೂ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.



























