Home ಜಿಲ್ಲೆ ರಾಜಸ್ಥಾನದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಹಿಳಾ ವಿವಿಯಲ್ಲಿ ಮಾನವ ಸರಪಳಿ

ರಾಜಸ್ಥಾನದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಹಿಳಾ ವಿವಿಯಲ್ಲಿ ಮಾನವ ಸರಪಳಿ

ವಿಜಯಪುರ, ಜು. 10: ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ, ಮಾನವ ಕಳ್ಳಸಾಗಣೆ ಹಾಗೂ ಸಾಮೂಹಿಕ ಅತ್ಯಾಚಾರದ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು, ಅಧ್ಯಾಪಕರು ಹಾಗೂ ಸಿಬ್ಬಂದಿ ಭಾಗವಹಿಸಿ ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿದರು. ಬಳಿಕ ಸಹಿ ಸಂಗ್ರಹ ಅಭಿಯಾನವೂ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗಳಾಗಿವೆ. ಇಂತಹ ಅಮಾನವೀಯ ಕೃತ್ಯಗಳನ್ನು ವಿಶ್ವವಿದ್ಯಾನಿಲಯ ತೀವ್ರವಾಗಿ ಖಂಡಿಸುತ್ತಿದ್ದು, ಸಂತ್ರಸ್ತೆಯರೊಂದಿಗೆ ಸದಾ ನೈತಿಕವಾಗಿ ನಿಲ್ಲಲಿದೆ ಎಂದು ಹೇಳಿದರು.
ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪೆÇ್ರ. ಲಕ್ಷ್ಮಿದೇವಿ ವಾಯ್ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಹೆಚ್ಚಳ ಸಮಾಜದ ಮೌಲ್ಯಗಳಿಗೆ ಸವಾಲಾಗಿದೆ. ಲಿಂಗಸೂಕ್ಷ್ಮತೆಯ ಅರಿವು ಬೆಳೆಸುವುದು ಇಂದಿನ ಅಗತ್ಯವಾಗಿದ್ದು, ಮಹಿಳೆಯರನ್ನು ಗೌರವದಿಂದ ಕಾಣುವ ಮನೋಭಾವವನ್ನು ಸಮಾಜದಲ್ಲಿ ರೂಪಿಸಬೇಕಾಗಿದೆ ಎಂದು ಹೇಳಿದರು.
ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶಕಿ ಪೆÇ್ರ. ಜ್ಯೋತಿ ಉಪಾಧ್ಯೆ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಲಿಂಗ ಸಮಾನತೆ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಮನೆಯಲ್ಲಿಯೇ ಕಲಿಸಬೇಕು. ಮಹಿಳೆಯರ ವಿರುದ್ಧ ನಡೆಯುವ ಹೀನ ಕೃತ್ಯಗಳನ್ನು ಪ್ರತಿಯೊಬ್ಬರೂ ಖಂಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸಮಾಜ ಜಾಗೃತವಾಗಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ವಿಶ್ವವಿದ್ಯಾನಿಲಯದ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ-ಸ್ನಾತಕೋತ್ತರ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಮಹಿಳಾ ಅಧ್ಯಯನ ಕೇಂದ್ರದ ಡಾ. ಭಾಗ್ಯಶ್ರೀ ದೊಡಮನಿ, ಡಾ. ಸರೋಜಾ ಸಂತಿ, ಡಾ. ಶಶಿಕಲಾ ರಾಠೋಡ, ಡಾ. ರಜಿಯಾ ನದಾಫ, ಅಂಬಿಕಾ ಮಾಲಗಾರ ಹಾಗೂ ಕಾವೇರಿ ಇಂಡಿಕರ ಉಪಸ್ಥಿತರಿದ್ದರು.