Home ಮುಖಪುಟ ಸುದ್ದಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ದಿಢೀರ್ ನಾಪತ್ತೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ದಿಢೀರ್ ನಾಪತ್ತೆ

ಬೆಂಗಳೂರು,ಆ.೨೨-ಈ ಹಿಂದೆ ಕೆಪಿಎಸ್‌ಸಿಯಲ್ಲಿ ಕಾರ್ಯನಿರ್ವಹಿಸಿದ್ದ ರಾಜ್ಯದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಗರದಿಂದ ದಿಢೀರ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.


ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳೆದ ಆ.೨೦ರಂದು ತೆರಳಿದ್ದ ಅವರು ಬೆಳಗ್ಗೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


ಜ್ಞಾನೇಂದ್ರ ಕುಮಾರ್ ನವದೆಹಲಿಗೆ ತೆರಳಲು ವಿಮಾನದ ಟಿಕೆಟ್ ಬುಕ್ ಮಾಡಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳುವುದಾಗಿ ತಿಳಿಸಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರೂ, ಅಲ್ಲಿಂದ ಅವರು ವಿಮಾನ ಏರಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಟ್ರ್ಯಾಕ್ ಮಾಡಿದ್ದು, ಬಳಿಕ ಮೊಬೈಲ್ ಸಂಪರ್ಕ ಕಡಿತಗೊಂಡಿದೆ.


ಜ್ಞಾನೇಂದ್ರ ಕುಮಾರ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವ ಹಿನ್ನೆಲೆಯಲ್ಲಿ ನವದೆಹಲಿ ಕಡೆಗೆ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದರೆ, ಅವರ ಕುಟುಂಬದವರ ಸಂಪರ್ಕಕ್ಕೂ ಅಧಿಕಾರಿ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ.


ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಸದ್ಯ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ ಎಂಇ) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಸೇವೆ ಸಲ್ಲಿಸಿದ್ದರು.


ಪೊಲೀಸರಿಂದ ಶೋಧ:


ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಯ ಚಲನವಲನದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ವಿಮಾನ ನಿಲ್ದಾಣದದಿಂದ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ.


ಅಕ್ರಮದ ಬೆನ್ನಲ್ಲೇ ನಾಪತ್ತೆ:


ಜ್ಞಾನೇಂದ್ರ ಕುಮಾರ್ ಅವರ ನಾಪತ್ತೆ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿರುವ ಕೆಪಿಎಸ್ ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.


ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ. ಇಡಿ ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಧಿಕಾರಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ಅವರ ನಾಪತ್ತೆಯ ಹಿಂದಿನ ನಿಖರ ಕಾರಣ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.