
ಯಾದಗಿರಿ: ಜೂ.೧೫:ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ ಹಾಗೂ ಅಡ್ಡೊಡಗಿ ಗ್ರಾಮಗಳ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ೮ ಹಿಟಾಚಿ ಹಾಗೂ ಜೆಸಿಬಿ ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಕುರಿತು ಬಂದ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿದ ಅಧಿಕಾರಿಗಳ ತಂಡ, ಅನಧಿಕೃತವಾಗಿ ಮರಳು ತೆಗೆಯಲು ಬಳಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದು ಸುರಪುರ ಪೊಲೀಸ್ ಠಾಣೆಯ ಸುಪರ್ದಿಗೆ ಒಪ್ಪಿಸಿದೆ. ಈ ಸಂಬAಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ ೦೧೫೦/೨೦೨೬ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ವಿರೇಶ ತಿಳಿಸಿದ್ದಾರೆ.
ಜಿಲ್ಲೆಯ ಸುರಪುರ, ಶಹಾಪುರ, ವಡಗೇರಾ ಸೇರಿದಂತೆ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಅಕ್ರಮ ಮರಳು, ಮುರಂ ಹಾಗೂ ಇತರೆ ಉಪಖನಿಜಗಳ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವು ದೂರುಗಳು ಬರುತ್ತಿವೆ. ಇಂತಹ ಚಟುವಟಿಕೆಗಳನ್ನು ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮರಳು ಉಸ್ತುವಾರಿ ಸಮಿತಿ ಸದಸ್ಯರಿಗೆ ಅಕ್ರಮ ಗಣಿಗಾರಿಕೆ ನಡೆಸುವ ವ್ಯಕ್ತಿಗಳು, ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಅದರಂತೆ ಜೂ.೧೨ ರಂದು ಹೆಮ್ಮಡಗಿ ಮತ್ತು ಅಡ್ಡೊಡಗಿ ಗ್ರಾಮದ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಈ ವೇಳೆ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ೮ ಹಿಟಾಚಿ/ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಯಾದಗಿರಿ ಜಿಲ್ಲೆಯಾದ್ಯಂತ ಅಕ್ರಮ ಮರಳು, ಮುರಂ ಹಾಗೂ ಇತರೆ ಉಪಖನಿಜಗಳ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮರಳು ಉಸ್ತುವಾರಿ ಸಮಿತಿ ಸದಸ್ಯರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


























