Home ಜಿಲ್ಲೆ ಕಲಬುರಗಿ ಓಬಿಸಿ ಸಮುದಾಯಗಳಲ್ಲೂ ಒಳಮೀಸಲಾತಿ ಜಾರಿಗೆ ತರಲಿ: ದೇವಿಂದ್ರ ದೇಸಾಯಿ ಕಲ್ಲೂರ

ಓಬಿಸಿ ಸಮುದಾಯಗಳಲ್ಲೂ ಒಳಮೀಸಲಾತಿ ಜಾರಿಗೆ ತರಲಿ: ದೇವಿಂದ್ರ ದೇಸಾಯಿ ಕಲ್ಲೂರ

ಕಲಬುರಗಿ,ಆ.18: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಹಿಂದುಳಿದ ವರ್ಗಗಳ (ಓಬಿಸಿ) ಮೀಸಲಾತಿ ವ್ಯವಸ್ಥೆಯನ್ನೂ ಸಮಗ್ರವಾಗಿ ಮರುಪರಿಶೀಲಿಸಿ, ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಓಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರಬೇಕೆಂದು ವಿಶ್ವಕರ್ಮ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೀಸಲಾತಿಯ ಮೂಲ ಆಶಯ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶ ಕಲ್ಪಿಸುವುದಾಗಿದೆ. ಆದರೆ ಹಿಂದುಳಿದ ವರ್ಗಗಳಲ್ಲಿನ ಕೆಲವೇ ಕೆಲವು ಪ್ರಬಲ ಸಮುದಾಯಗಳು ಮೀಸಲಾತಿಯ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಅನೇಕ ಅತ್ಯಂತ ಹಿಂದುಳಿದ ಸಮುದಾಯಗಳು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಇನ್ನೂ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ಅಧ್ಯಯನ ನಡೆಸಿ, ಅತ್ಯಂತ ಹಿಂದುಳಿದ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಿ ಅವರಿಗೆ ನ್ಯಾಯಯುತ ಪಾಲು ದೊರಕುವಂತೆ ಓಬಿಸಿ ವರ್ಗದಲ್ಲಿಯೂ ಒಳಮೀಸಲಾತಿ ಜಾರಿಗೆ ತರುವ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿಯೇ ಗಂಭೀರ ಚರ್ಚೆ ನಡೆಸಬೇಕು. ಅಗತ್ಯವಿದ್ದಲ್ಲಿ ತಜ್ಞರ ಸಮಿತಿ ರಚಿಸಿ ವರದಿ ಪಡೆದು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಿಶ್ವಕರ್ಮ ಪಂಚ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳಿಗೆ ಸರ್ಕಾರದ ಯೋಜನೆಗಳು ಮತ್ತು ಅವಕಾಶಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಂತಹ ಸಮುದಾಯಗಳ ಸಬಲೀಕರಣಕ್ಕಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಜೊತೆಗೆ ಮೀಸಲಾತಿ ವ್ಯವಸ್ಥೆಯಲ್ಲಿಯೂ ನ್ಯಾಯಯುತ ಪಾಲು ಕಲ್ಪಿಸುವುದು ಕಾಲದ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸೂಕ್ತ ರಾಜಕೀಯ ಪ್ರಾತಿನಿಧ್ಯ:
ಇದೇ ಸಂದರ್ಭದಲ್ಲಿ, ರಾಜ್ಯದ ವಿಶ್ವಕರ್ಮ ಪಂಚ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಸಮುದಾಯದ ಅರ್ಹ ವ್ಯಕ್ತಿಯೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಬೇಕು. ಇದರಿಂದ ಸಮುದಾಯದ ಸಮಸ್ಯೆಗಳು ವಿಧಾನಮಂಡಲದಲ್ಲಿ ಪರಿಣಾಮಕಾರಿಯಾಗಿ ಪ್ರತಿಧ್ವನಿಸಲಿದ್ದು, ಸರ್ಕಾರದ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂದು ದೇವಿಂದ್ರ ದೇಸಾಯಿ ಕಲ್ಲೂರ ತಿಳಿಸಿದ್ದಾರೆ.
ಓಬಿಸಿ ಸಮುದಾಯಗಳಲ್ಲಿನ ಅತ್ಯಂತ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಸ್ಪಷ್ಟ ನೀತಿ ಪ್ರಕಟಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.