Home ಜಿಲ್ಲೆ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಿ

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಿ

ಹಾವೇರಿ,ಆ೧೧: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಜೊತೆಗೆ ಕಲಿಕಾ ಗುಣಮಟ್ಟವನ್ನು ಸುಧಾರಿಸಬೇಕು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಶಿಕ್ಷಕರು, ಅಧಿಕಾರಿಗಳು ಹಾಗೂ ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಆಯೋಜಿಸಲಾಗಿದ್ದ ವಿಧಾನಸಭಾ ಮತಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ಹಾಗೂ ತಾಲೂಕು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು. ಶಾಲಾ ಕಟ್ಟಡ, ಶೌಚಾಲಯ, ಕುಡಿಯುವ ನೀರು, ಶಾಲಾ ಆವರಣ ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವುದು ಇಂದಿನ ಪ್ರಮುಖ ಅಗತ್ಯವಾಗಿದೆ. ಆಂಗ್ಲ ಮಾಧ್ಯಮದತ್ತ ಪೋಷಕರು ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣದೊಂದಿಗೆ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳನ್ನು ಪ್ರಾಥಮಿಕ ಹಂತದಿAದಲೇ ಸರ್ಕಾರಿ ಶಾಲೆಗಳತ್ತ ಆಕರ್ಷಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಶ್ರೀನಿವಾಸ್ ಶಿಕ್ಷಣ ಇಲಾಖೆಯ ಪ್ರಗತಿ ಕುರಿತು ಮಾಹಿತಿ ನೀಡಿ, ೨೦೨೬-೨೭ನೇ ಸಾಲಿನಲ್ಲಿ ೧ರಿಂದ ೧೦ನೇ ತರಗತಿ ವರೆಗೆ ೪೭,೬೭೧ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಹಾವೇರಿ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೯೭.೪೧ರಷ್ಟು ಫಲಿತಾಂಶ ದಾಖಲಾಗಿದ್ದು, ಹಿಂದಿನ ಸಾಲಿನ ಶೇ. ೬೯.೭೩ಕ್ಕೆ ಹೋಲಿಸಿದರೆ ಗಣನೀಯ ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಅಂಗವಿಕಲ ಮಕ್ಕಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಉಪ ನಿರ್ದೇಶಕ ಮೋಹನ ದಂಡಿನ, ಸಹಾಯಕ ಕಾರ್ಯಪಾಲಕ ಅಭಿಯಂತರ ಪಂಚಾಯತ್ ರಾಜ್ ಇಲಾಖೆಯ ಕಿರಣಕುಮಾರ್ ನಾಯಕ್, ಸವಣೂರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ಭಗವತ್ ಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೆಗಣ್ಣಿ, ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು, ಅಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.