
ಬೀದರ, ಡಿ.26:ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟಿನ್ ಅನುಕೂಲವಾಗಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.
ಇವರು ಇಂದು ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ, ಉಪಹಾರ ಸೇವಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಆಶಯದಂತೆ ಹಾಗೂ ಯಾರು ಹಸುವಿನಿಂದ ಇರಬಾರದು ಎಂಬ ಕಾರಣಕ್ಕೆ ನಗರ ಪ್ರದೇಶದ ಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ನಗರದ ಓಲ್ಡ್ ಸಿಟಿಯ ಜನರಿಗೆ ಮತ್ತು ಇಲ್ಲಿನ ಆಸ್ಪತ್ರೆಗೆ ಬರುವ ಜನರಿಗೆ ಈ ಕ್ಯಾಂಟಿನ್ ಉಪಯುಕ್ತವಾಗಲಿದೆ. ಬೀದರ ನಗರದಲ್ಲಿ 3 ಹೊಸ ಇಂದಿರಾ ಕ್ಯಾಂಟಿನ್ ಆರಂಭವಾಗಲಿವೆ ಎಂದರು.
ನಗರ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ರಸ್ತೆ ಮತ್ತು ಡ್ರೆನ್‍ಗಾಗಿ 100 ಕೋಟಿ ಹಾಗೂ 50 ಕೋಟಿ ವಿಶೇಷ ಅನುದಾನ ಮುಖ್ಯಮಂತ್ರಿಗಳು ನೀಡಿದ್ದಾರೆ. ನಗರೋತ್ಥಾನ ಯೋಜನೆಯಡಿ 50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬಿ-ಖಾತಾದ ಉಪಯೋಗ ಜನರು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶಿವರಾಜ್ ರಾಥೋಡ್ ಸೇರಿದಂತೆ ನಗರಸಭೆಯ ಸದಸ್ಯರು ಮತ್ತು ಗಣ್ಯ ಮಾನ್ಯರು ಉಪಸ್ಥಿತರಿದ್ದರು.

























