Home ಜಿಲ್ಲೆ ಠಾಣಗುಂದಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ

ಠಾಣಗುಂದಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ

ಯಾದಗಿರಿ:ಮಾ.೧೦:ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಠಾಣಗುಂದಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು. ಮಹಿಳೆಯರ ಸಬಲೀಕರಣ, ಶಿಕ್ಷಣ ಹಾಗೂ ಸ್ವಾವಲಂಬನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಫಾದರ್ ಶಾಬು ಫ್ರಾನ್ಸಿಸ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಹಿಳೆಯರು ಶಿಕ್ಷಣ ಹಾಗೂ ಸ್ವಯಂ ಉದ್ಯೋಗದ ಮೂಲಕ ಜೀವನದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಾತನಾಡಿದ ಠಾಣಗುಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ , ಮಹಿಳೆಯರು ಕುಟುಂಬ ಮತ್ತು ಸಮಾಜದ ಬಲವಾದ ಅಸ್ತಂಭವಾಗಿದ್ದು, ಅವರಿಗೆ ದೊರೆಯುವ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ದೇವೇಂದ್ರಪ್ಪ ಬಂದಳ್ಳಿ ಮಾತನಾಡಿ, ಮಹಿಳೆಯರು ಆತ್ಮವಿಶ್ವಾಸದಿಂದ ಮುಂದೆ ಬಂದರೆ ಸಮಾಜದಲ್ಲಿ ದೊಡ್ಡ ಬದಲಾವಣೆ ತರಲು ಸಾಧ್ಯ. ಮಹಿಳೆಯರ ಅಭಿವೃದ್ಧಿಗೆ ತಮ್ಮ ಸಂಸ್ಥೆ ಸದಾ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಮೈಂಡ್ ಯೋಜನೆಯ ಸಂಯೋಜಕರಾದ ಶರಣಪ್ಪ ಸಿ. ಅಮರಾಪುರ್ ಅವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಮಹಿಳೆಯರಿಗೆ ಲಭ್ಯವಿರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಗಾಯನ ಸ್ಪರ್ಧೆ ಹಾಗೂ ವಿವಿಧ ಮನರಂಜನಾ ಆಟಗಳು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಅನೇಕ ಮಹಿಳೆಯರು ಹಾಗೂ ಯುವತಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಹಿಳೆಯರಲ್ಲಿ ಆತ್ಮವಿಶ್ವಾಸ ಹಾಗೂ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.