
ಹುಬ್ಬಳ್ಳಿ,ಜ.೨೫: ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮಂಟೂರು ರಸ್ತೆಯಲ್ಲಿ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮಂಡಳಿ ವತಿಯಿಂದ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ ೧,೮೦,೨೫೩ ಮನೆಗಳ ಪೈಕಿ ೨ನೇ ಹಂತದ ೪೨,೩೪೫ ಮನೆಗಳ ಲೋಕಾರ್ಪಣೆ ಹಾಗೂ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಮನೆ ಹಂಚಿಕೆ ಪತ್ರ – ಹಕ್ಕುಪತ್ರಗಳ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮನೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಕೊಳೆಗೇರಿ ಜನರು ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ ಎಂದರು.
ಮುAದಿನ ತಿಂಗಳಲ್ಲಿ ಬೆಣ್ಣೆ ಹಳ್ಳ ಪ್ರವಾಹ ತಡೆಗೆ ಚಾಲನೆ ನೀಡಲಾಗುವುದು. ಸುಮಾರು ೨೫೬ ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಅಲ್ಲದೇ ೩೬ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ತಲಾದಾಯದಲ್ಲಿ ರಾಜ್ಯವು ಇಡೀ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಬಡವರ ಪರ, ಹಿಂದುಳಿದವರ ಪರ, ಮಹಿಳೆಯರ ಪರವಾಗಿದೆ. ಈ ಹಿಂದೆ ನೀಡಿದ್ದ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಲಾಗಿತ್ತು. ಪ್ರಸ್ತುತ ೫೯೨ ಭರವಸೆಗಳಲ್ಲಿ ೨೪೩ ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಅಸಮಾನತೆ ತೊಲಗಿಸಿ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.
ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿದರು. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಯಿತು. ಹಕ್ಕುಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್ ಮುನಿಯಪ್ಪ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಶಾಸಕರು, ಜನಪ್ರತಿನಿಧಿಗಳು, ಆಯೋಗ, ನಿಗಮ, ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಮಹಾನಗರ ಪಾಲಿಕೆ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಗದಗ, ಹಾವೇರಿ, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಫಲಾನುಭವಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.























