ಶಿಡ್ಲಘಟ್ಟ,ಜು,೦೫: ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಉದ್ದೇಶದಿಂದ ಹಲವು ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅದರ ಭಾಗವಾಗಿ ತಾಲ್ಲೂಕಿನ ಸಾದಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕ್ಷೇತ್ರದಲ್ಲೆ ಹಿಂದುಳಿದ ಶಾಲೆಯಾಗಿದ್ದರೂ ಶಿಕ್ಷಣದಲ್ಲಿ ಪ್ರಗತಿ ಸಾಧಿಸಿದ ಶಾಲೆಯಾಗಿ ಹೊರಹೊಮ್ಮಿದೆ.
ಸದ್ಯ ತಾಲ್ಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಕಲಿಕಾ ಸಾಮಗ್ರಿಗಳು ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಸಾದಲಿ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬಲವರ್ಧನೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಸಾದಲಿ ಗ್ರಾಮದ ಕೆಪಿಎಸ್ ಶಾಲೆ ಕಳೆದ ಬಾರಿಗೆ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಯನ್ನು ನೀಡಿ ಬಹುಮಾನ ದೊರೆತಿರುವುದು ಶಿಡ್ಲಘಟ್ಟ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದೆ.ಈ ಶಾಲೆಯಲ್ಲಿ ಆಧುನಿಕ ಸೌಲಭ್ಯಗಳು, ಉತ್ತಮ ತರಗತಿ ಕೊಠಡಿಗಳು, ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಗಳು ನಿರ್ಮಾಣವಾಗಲಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸಿಗಲಿದೆ ಎಂದು ತಿಳಿಸಿದರು.
ಕ್ಷೇತ್ರದ ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ಪ್ರತಿ ವರ್ಷ ಆದ್ಯತೆ ನೀಡಲಾಗುತ್ತಿದ್ದು, ಶಿಕ್ಷಣ, ರಸ್ತೆ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜನರ ಸಹಕಾರದಿಂದ ಈ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿದ್ದು, ಮುಂದಿನ ದಿನಗಳಲ್ಲಿ ಶಿಡ್ಲಘಟ್ಟ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಶಾಸಕ ರವಿಕುಮಾರ್, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳ ಒದಗಿಸುವಿಕೆ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ವರ್ಷ ನೀಡಿದಂತೆ ಮುಂದಿನ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸಾಧನೆ ಮಾಡಿದ ಶಾಲೆಗಳಿಗೆ ನಗದು ಬಹುಮಾನವನ್ನು ಮುಂದುವರಿಸಲಾಗುವುದು ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಸಾದಲಿ ಗ್ರಾಮದ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಕಲಿಕಾ ಸಾಮಗ್ರಿಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ ಹಾಗೂ ಪ್ರಭಾರಿ ಪ್ರಸನ್ನಕುಮಾರ್ , ಪ್ರಾಂಶುಪಾಲ ಶಿವಮೂರ್ತಿ, ಇ ತಿಮ್ಮಸಂದ್ರ ಶಿವಾರೆಡ್ಡಿ, ಮಂಜುನಾಥ್, ವೆಂಕಟರೆಡ್ಡಿ, ಸಿ ಆರ್ ಪಿ ನಾಗರಾಜು, ಸರ್ಕಾರಿ ನೌಕರರ ಅಧ್ಯಕ್ಷ ಸುಬ್ಬಾರೆಡ್ಡಿ , ಅಶ್ಪತ್ತಪ್ಪ, ಮಂಜುನಾಥ್, ತ್ಯಾಗರಾಜು, ಕೃಷ್ಣಾ ರೆಡ್ಡಿ, ನಂಜಪ್ಪ, ಎಸ್ ಎಂ ರಾಮಚಂದ್ರ, ಕೃಷ್ಣಪ್ಪ, ಶಿಕ್ಷಕ ಮಂಜುನಾಥ್, ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
































