
ಬೆಂಗಳೂರು. ಜೂ.೧೫-ಬೆಂಗಳೂರು ಅಭಿವೃದ್ಧಿ ಖಾತೆಯ ಅಧಿಕಾರಗಳ ಕುರಿತು ಸ್ಪಷ್ಟತೆ ಸಿಗುವವರೆಗೆ ಜವಾಬ್ದಾರಿ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. “ನನಗೆ ಯಾವುದೇ ಅಸಮಾಧಾನ ಇಲ್ಲ. ಮುಖ್ಯಮಂತ್ರಿ ಹಾಗೂ ಪಕ್ಷವು ಬೆಂಗಳೂರಿನ ಅಭಿವೃದ್ಧಿಯಂತಹ ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ಇದನ್ನು ಅಧಿಕಾರದ ಸ್ಥಾನವಾಗಿ ಅಲ್ಲ, ದೊಡ್ಡ ಹೊಣೆಗಾರಿಕೆಯಾಗಿ ನೋಡುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದೀಗ ಸಚಿವರ ಈ ಹೇಳಿಕೆಯ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ಆಯೋಜನೆಗೊಳ್ಳಬೇಕಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ .ಅಂಬೇಡ್ಕರ್ ಜಯಂತಿ ಆಚರಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ, ಕಳೆದ ಶುಕ್ರವಾರ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಬೆಂಗಳೂರು ನಗರ ಉಸ್ತುವಾರಿ ಸಚಿವರ ನೇಮಕವಾಗುವವರೆಗೆ ಯಾವುದೇ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸದಿರುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಅಧಿಕೃತ ಕಾರ್ಯಕ್ರಮ ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಅಧಿಕಾರಿಗಳ ವಲಯದಲ್ಲಿ ವ್ಯಕ್ತವಾಗಿದೆ.
ಇದೇ ಹಿನ್ನೆಲೆಯಲ್ಲಿ, ಜೂನ್ ೧೮ರಂದು ನಡೆಯಬೇಕಿದ್ದ ಅಂಬೇಡ್ಕರ್ ಜಯಂತಿ ಹಾಗೂ ಜೂನ್ ೨೭ರಂದು ನಿಗದಿಯಾಗಿದ್ದ ಕೆಂಪೇಗೌಡ ಜಯಂತಿ ಆಚರಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಜೊತೆಗೆ, ಕೆಂಪೇಗೌಡ ಪ್ರಶಸ್ತಿಗೆ ಅರ್ಹರ ಪಟ್ಟಿಯನ್ನು ಸಿದ್ಧಪಡಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಬೆಂಗಳೂರು ನಗರ ಉಸ್ತುವಾರಿ ಸಚಿವರ ನೇಮಕ ಹಾಗೂ ಅಭಿವೃದ್ಧಿ ಖಾತೆಯ ಅಧಿಕಾರಗಳ ಕುರಿತು ಸ್ಪಷ್ಟತೆ ಸಿಗುವವರೆಗೆ ಯಾವುದೇ ಪ್ರಕ್ರಿಯೆ ಮುಂದುವರಿಸದಿರಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ ಈ ಬಾರಿಯ ಜಯಂತಿ ಆಚರಣೆಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.




























