Home ಜಿಲ್ಲೆ ಕಲಬುರಗಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಮೂರು ಮುಖಗಳು: ಚೌಡಪ್ಪ

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಮೂರು ಮುಖಗಳು: ಚೌಡಪ್ಪ

ಅಫಜಲಪುರ : ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಮೂರು ಮುಖಗಳಿದ್ದಂತೆ. ಈ ಎಲ್ಲ ಪಕ್ಷಗಳಿಗೆ ಸೆಡ್ಡು ಹೊಡೆದು ಕರ್ನಾಟಕದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್‍ಸಿಪಿ) ಬೆಳೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಎಸ್‍ಸಿ-ಎಸ್‍ಟಿ ವಿಭಾಗದ ರಾಜ್ಯಾಧ್ಯಕ್ಷ ಎಸ್.ವಿ. ಚೌಡಪ್ಪ ಹೇಳಿದರು.

ಪಟ್ಟಣದ ಮಹಾಂತೇಶ್ವರ ಫಂಕ್ಷನ್ ಹಾಲ್‍ನಲ್ಲಿ ಕಲಬುರಗಿ ಜಿಲ್ಲಾ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಇದುವರೆಗೂ ಆದ್ಯತೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು ನಗರಕ್ಕೆ ಮಾತ್ರ ಹೆಚ್ಚಿನ ಆದ್ಯತೆ ನೀಡದೆ, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಈ ಭಾಗದ ಮೂಲಸೌಕರ್ಯ, ಶಿಕ್ಷಣ, ಉದ್ಯೋಗ ಹಾಗೂ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಕೈಜೋಡಿಸಬೇಕು. ಜಿಲ್ಲೆಯ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿಯಾಗಬೇಕು ಎಂದು ಚೌಡಪ್ಪ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ತಿಮ್ಮಣ್ಣ ಅವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ನಾಗಮ್ಮ ಹಡಪಾದ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಕುಮಾರಸ್ವಾಮಿ, ರಮೇಶ್, ಚನ್ನಯ್ಯ, ಅಂಜುನಪ್ಪಗೌಡ, ನಾಗರಾಜ, ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.