
ಕುಣಿಗಲ್, ಸೆ. ೩- ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ಕೂಲಿಕಾರರಿಗೂ ಜಿಆರ್‌ಜಿಸಿ ಜಾಬ್ ಕಾರ್ಡ್ ದೊರೆಯುವಂತೆ ಮಾಡುವ ಉದ್ದೇಶದಿಂದ ತಾಲ್ಲೂಕಿನ ನಿಡಸಾಲೆ ಗ್ರಾಮ ಪಂಚಾಯ್ತಿಗಳಲ್ಲಿ ಹಮ್ಮಿಕೊಂಡಿರುವ ಜಾಬ್‌ಕಾರ್ಡ್ ಮೇಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್‌ಕುಮಾರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ವಿಬಿ ಜಿ-ರಾಮ್‌ಜಿ ಯೋಜನೆಯಡಿ ಅರ್ಹ ಕೂಲಿಕಾರರಿಗೆ ದಿನಕ್ಕೆ ೩೮೨ ರೂ. ಕೂಲಿ ದೊರೆಯಲಿದ್ದು, ಗ್ರಾಮೀಣ ಜನರು ಕೃಷಿ ಹೊಂಡ, ತೋಟಗಾರಿಕಾ ಅಭಿವೃದ್ಧಿ, ದನದ ಕೊಟ್ಟಿಗೆ, ಮೇಕೆ ಶೆಡ್ ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಅರ್ಹರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕುಣಿಗಲ್ ತಾಲ್ಲೂಕು ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವ ನಿಟ್ಟಿನಲ್ಲಿ ಗ್ರಾಮೀಣ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯಡಿ ಉದ್ಯೋಗ ಪಡೆಯಬೇಕು ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಕಾಂತರಾಜು ಮಾತನಾಡಿ, ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿಯೂ ಹೊಸ ಹಾಗೂ ವೈಯಕ್ತಿಕ ಕಾಮಗಾರಿಗಳಿಗೆ ಅಗತ್ಯ ಅನುಮೋದನೆ ಪಡೆದು ಕೆಲಸ ಹಂಚಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಜನರಿಗೆ ಆದ್ಯತೆ ಮೇರೆಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ), ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು.


































