
ಕಲಬುರಗಿ:ಶರಣಬಸವ ವಿಶ್ವವಿದ್ಯಾಲಯ ಹಾಗೂ ಸುರಪುರದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಒಟ್ಟು 30 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೂರು ತಿಂಗಳ ಕಡ್ಡಾಯ ಇಂಟರ್ನ್‍ಶಿಪ್ ಜೊತೆಗೆ ವಾರ್ಷಿಕ 3 ಲಕ್ಷದ ಆಕರ್ಷಕ ವೇತನ ಪ್ಯಾಕೇಜ್‍ನೊಂದಿಗೆ ಖಾಯಂ ಉದ್ಯೋಗದ ಅವಕಾಶ ಕಲ್ಪಿಸಲಾಗಿದೆ.
ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಇಂಜಿನಿಯರಿಂಗ್ ಪದವಿ ಕೋರ್ಸ್‍ನ ಭಾಗವಾಗಿ ಬೆಂಗಳೂರಿನ ಎಕೋ ಬ್ರೇನ್ ಟೆಕ್ನಾಲಜೀಸ್ ಕಚೇರಿಯಲ್ಲಿ ಮೂರು ತಿಂಗಳ ಕಡ್ಡಾಯ ಇಂಟರ್ನ್‍ಶಿಪ್ ಪೂರ್ಣಗೊಳಿಸಬೇಕು. ಇಂಟರ್ನ್‍ಶಿಪ್ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳನ್ನು ಸಂಸ್ಥೆಯಲ್ಲಿ ಖಾಯಂ ಸಿಬ್ಬಂದಿಯಾಗಿ ನೇಮಕ ಮಾಡಿಕೊಳ್ಳಲಾಗುವುದು. ಈ ವೇಳೆ ಅವರಿಗೆ ವಾರ್ಷಿಕ 3 ಲಕ್ಷದ ವೇತನ ಪ್ಯಾಕೇಜ್ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಎಕೋ ಬ್ರೇನ್ ಟೆಕ್ನಾಲಜೀಸ್ ಹಾಗೂ ಡೆಕ್ಸ್ಟ್ರಿಸ್ ಇನ್ಫೋ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ಸಹಯೋಗದಲ್ಲಿ ಈ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಆಯೋಜಿಸಲಾಗಿತ್ತು. ವಿಶ್ವವಿದ್ಯಾಲಯದ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಸುಮಾರು 500 ವಿದ್ಯಾರ್ಥಿಗಳು ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜನೆಗೊಂಡಿರುವ ಸುರಪುರದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ 70 ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಈ ಪೈಕಿ ಶರಣಬಸವ ವಿಶ್ವವಿದ್ಯಾಲಯದ 26 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾದರೆ, ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ನೇಮಕಾತಿ ಪಡೆಯುವಲ್ಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರು ಆಶೀರ್ವದಿಸಿ ಶುಭ ಕೋರಿದ್ದಾರೆ. ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮಿ ಪಾಟೀಲ ಮಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ ಹಾಗೂ ಹಣಕಾಸು ಅಧಿಕಾರಿ ಡಾ. ಕಿರಣ ಮಕಾ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ ಬೋಧಕ ಸಿಬ್ಬಂದಿಯನ್ನೂ ಗಣ್ಯರು ಅಭಿನಂದಿಸಿದ್ದಾರೆ.























