
ಬೆಂಗಳೂರು, ಸೆ. ೨೬- ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಇಂದು ರಾಜ್ಯಾದ್ಯಂತ ಪ್ರತಿಭಟನಾ ಧರಣಿ ನಡೆಸಿದ್ದು, ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದು, ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್‌ನ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರುಗಳು, ಎಸ್‌ಐಆರ್‌ನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ರಾಜೀನಾಮೆ ಪಡೆಯಬೇಕು ಇಲ್ಲದಿದ್ದರೆ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಮುಖ್ಯ ಚುನಾವಣಾ ಆಯುಕ್ತರ ನಡೆ ವಿರುದ್ಧ ಆಯೋಗದ ಇನ್ನಿಬ್ಬರು ಆಯುಕ್ತರು ಧ್ವನಿ ಎತ್ತಿದ್ದಾರೆ. ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ. ಈ ಎಸ್‌ಐಆರ್‌ನ್ನು ರದ್ದುಪಡಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.
ಜ್ಞಾನೇಶ್‌ಕುಮಾರ್, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳು, ಧಿಕ್ಕಾರದ ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಈ ಪ್ರತಿಭಟನೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು, ಇಡೀ ಸ್ವತಂತ್ರ ಉದ್ಯಾನನದಲ್ಲಿ ಕಾಂಗ್ರೆಸ್ ಬಾವುಟಗಳ ಭರಾಟೆ ಜೋರಾಗಿದ್ದು, ಇಡೀ ಉದ್ಯಾನವನ ಕಾಂಗ್ರೆಸ್ ಮಯವಾಗಿತ್ತು.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದರು.
ಆಯೋಗ ಬಿಜೆಪಿ ಕೈಗೊಂಬೆ: ಸಿಎಂ
ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಕೈಗೊಂಬೆಯಾಗಿರುವುದಕ್ಕೆ ಸಾಕ್ಷಿಗಳಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮೇಲಿನ ಆರೋಪಗಳನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.
ಮತದಾನದ ಹಕ್ಕು ದುರುಪಯೋಗವಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವಕ್ಕೆ ತೊಂದರೆಯಾಗಿದೆ. ಇಡೀ ವಿಶ್ವವೇ ಭಾರತದ ಮತದಾನದ ಮೇಲೆ ನಂಬಿಕೆ ಕಳೆದುಕೊಂಡಿದೆ ಎಂದರು.
ಚುನಾವಣಾ ಆಯೋಗಕ್ಕೆ ಸಂವಿಧಾನದ ರಕ್ಷಣೆ ಕೊಟ್ಟಿದ್ದೇವೆ. ಆದರೆ ಚುನಾವಣಾ ಆಯೋಗ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಿದೆ ಎಂದು ದೂರಿದರು.
ರಾಜ್ಯದಲ್ಲೂ ೧ ಕೋಟಿ ಮತದಾರನ್ನು ಎಸ್‌ಐಆರ್‌ನಲ್ಲಿ ತೆಗೆಯಲಾಗಿದೆ. ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಇರಬೇಕು. ಚುನಾವಣಾ ಆಯೋಗವನ್ನೇ ವಜಾ ಮಾಡಬೇಕು ಎಂದು ಆಗ್ರಹಿಸಿದರು
ನಾವು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತ ಪತ್ರಗಳ ಮೂಲಕವೇ ಮಾಡಲು ತೀರ್ಮಾನಸಿದ್ದೇವೆ. ಪ್ರಜಾಪ್ರಭುತ್ವ ಉಳಿಸಲು ನಾವು ಮುಂದಾಗಿದ್ದೇವೆ ಎಂದರು
ಕೇಂದ್ರ ಚುನಾವಣಾ ಆಯುಕ್ತರ ವಿರುದ್ದ ಆರೋಪಗಳು ಬಂದಿರುವುದರಿಂದ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಈಗಿನ ಚುನಾವಣಾ ಆಯೋಗವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಅಧಿಕಾರ ವ್ಯಾಮೋಹ ಜಾಸ್ತಿ ದಿನ ಇರುವುದಿಲ್ಲ ಸೂರ್ಯ ಹುಟ್ಟಿದ ಮೇಲೆ ಮುಳುಗಲೇಬೇಕು. ಪ್ರಧಾನಿಗಳಿಗೆ, ಕೇಂದ್ರ ಸಚಿವರುಗಳಿಗೆ ಇದು ಮನವರಿಕೆಯಾಗಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಅಳಿವು-ಉಳಿವಿನ ಪ್ರಶ್ನೆ:ಸಿದ್ದು
ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದು, ಅವರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಸಿಇಸಿ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇತ್ತೀಚೆಗೆ ಚುನಾವಣಾ ಆಯೋಗದಲ್ಲಿ ಕೆಲವು ಬೆಳವಣಿಗೆಗಳು ನಡೆದಿವೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವವರು ಆತಂಕದಲ್ಲಿ ಇದ್ದಾರೆ ಎಂದರು.
ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ, ಐದು ವರ್ಷಕ್ಕೊಮ್ಮೆ ಚುನಾವಣೆಯನ್ನು ಸ್ವತಂತ್ರವಾಗಿ ನಡೆಸಬೇಕು. ಪಾರದರ್ಶಕತೆಯಿಂದ ಚುನಾವಣೆ ನಡೆಸಬೇಕಿರುವುದು ಸಂವಿಧಾನದ ಆಶಯ. ಸ್ವತಂತ್ರವಾಗಿ ಚುನಾವಣೆಗಳು ನಡೆಯದಿದ್ದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಇದು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆ ಎಂದರು.
ಚುನಾವಣಾ ಆಯೋಗದ ಆಯುಕ್ತರುಗಳು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳಬಾರದು. ಒಂದು ವೇಳೆ ಅವರು ಆ ರೀತಿ ನಡೆದುಕೊಂಡರೆ ರಾಷ್ಟ್ರಪತಿಗಳು ಅವರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿದರು.
ಇತ್ತೀಚಿನ ವರ್ಷಗಳಲ್ಲಿ ಚುನಾವಣಾ ಆಯೋಗ ಕೇಂದ್ರ ಸರ್ಕಾರ ದಕೈಗೊಂಬೆಯಾಗಿ ವರ್ತಿಸುತ್ತಿದೆ. ಈಗಿನ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಇನ್ನಿಬ್ಬರು ಆಯುಕ್ತರು ಆಕ್ಷೇಪ ಎತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಗೆ ಪ್ರಧಾನಿ ಮೋದಿ, ಅಮಿತ್‌ಶಾ ಕಾರಣ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಚುನಾವಣಾ ಆಯೋಗದಲ್ಲಿ ಅಕ್ರಮ ನಡೆಸಿರುವ ಜ್ಞಾನೇಶ್‌ಕುಮಾರ್ ಅವರನ್ನು ವಜಾ ಮಾಡುವುದಷ್ಟೇ ಅಲ್ಲ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದ ಸಿದ್ದರಾಮಯ್ಯ ಅವರು, ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಜ್ಞಾನೇಶ್‌ಕುಮಾರ್ ಅವರನ್ನು ವಜಾಗೊಳಿಸಿ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಆಗ್ರಹಿಸಿದರು.
ಜೆನ್‌ಜಿ ಹೆಸರು ತೆಗೆಯುವ ಹುನ್ನಾರ
ದೇಶದ ಜೆನ್‌ಜಿ ಮೋದಿ ಅವರ ವಿರುದ್ಧ ಇದೆ. ಹಾಗಾಗಿ ಜೆನ್‌ಜಿ ಮತದಾರರನ್ನು ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.
ಸಿಇಸಿ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮೋದಿ ಯಾವ ಅಲೆಯೂ ಇಲ್ಲ, ಅಮಿತ್ ಶಾ ಅವರ ಚಾಣಾಕ್ಷತನವೂ ಇಲ್ಲ. ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು.
ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ನಾಯಕನಿಗೂ ಮತದಾನ ಮಾಡುವ ಹಕ್ಕಿದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಹರಿಪ್ರಸಾದ್ ದೂರಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅಜ್ಞಾನಿ ಕುಮಾರ್ ಎಂದು ಕಿಡಿಕಾರಿದ ಅವರು, ನೈಜ ಮತದಾರರ ಹಕ್ಕನ್ನು ಕದಿಯುವ ಪ್ರಯತ್ನ ನಡೆದಿದೆ. ಮೋದಿ, ಅಮಿತ್ ಶಾ ಮಾತನ್ನು ಜ್ಞಾನೇಶ್‌ಕುಮಾರ್ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಸಾಂವಿಧಾನಿಕ ಪದವಿಯಲ್ಲಿರುವವರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. ಸಂವಿಧಾನ ರಕ್ಷಣೆಗೆ ನಮ್ಮ ಹೋರಾಟ ಎಂದು ಹರಿಪ್ರಸಾದ್ ಹೇಳಿದರು
ರಾಜ್ಯದಲ್ಲೂ ೧ ಕೋಟಿ ೫೦ ಲಕ್ಷ ಮತದಾರರನ್ನು ಕೈಬಿಡಲಾಗಿದೆ. ಅರ್ಹರನ್ನು ಮತದಾನದಿಂದ ದೂರ ಇಡುವ ಪ್ರಯತ್ನ ಆಗುತ್ತಿದೆ ಎಂದರು.
ಪೊಲೀಸರ ವಿರುದ್ಧ ಕಿಡಿ
ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಬೂತದಹನ ಮಾಡಲು ತಂಡ ವಸ್ತುಗಳನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಕೂಡಲೇ ಅದನ್ನು ತಂದುಕೊಡಬೇಕು. ಇಲ್ಲವಾದಲ್ಲಿ ಪೊಲೀಸರು ವಿರುದ್ಧವೂ ಹೋರಾಟ ಮಾಡುತ್ತೇವೆ ಎಂದು ಹರಿಪ್ರಸಾದ್ ಹೇಳಿದರು.


























