
ಕಲಬುರಗಿ: ಕಲಬುರಗಿ ನಗರ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ನಗರದಲ್ಲಿ ಬಹುಮಹಡಿ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಶಾಪಿಂಗ್ ಮಾಲ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಇಂತಹ ಕಟ್ಟಡಗಳಲ್ಲಿ ವಾಹನಗಳ ನಿಲುಗಡೆಗೆ ಸಮರ್ಪಕ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸದಿರುವುದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ದಿನನಿತ್ಯ ಟ್ರಾಫಿಕ್ ಸಮಸ್ಯೆ ತೀವ್ರವಾಗುತ್ತಿದೆ ಎಂದು ಜೈ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ದೇವಿಂದ್ರ ದೇಸಾಯಿ ಕಲ್ಲೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳು ಹಾಗೂ ವಾಣಿಜ್ಯ ಮಳಿಗೆಗಳಿಗೆ ಕಟ್ಟಡ ನಿರ್ಮಾಣ ಪರವಾನಗಿ ನೀಡುವ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಪಾಕಿರ್ಂಗ್ ವ್ಯವಸ್ಥೆಯ ಬಗ್ಗೆ ಪರೀಶೀಲನೆ ನಡೆಸುತ್ತಿದ್ದಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪಾಕಿರ್ಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳಿಗೆ ಯಾವ ಮಾನದಂಡದ ಆಧಾರದ ಮೇಲೆ ಕಟ್ಟಡ ನಿರ್ಮಾಣದ ಅನುಮತಿ ನೀಡಲಾಗುತ್ತಿದೆ ಎಂಬುದನ್ನು ಮಹಾನಗರ ಪಾಲಿಕೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಮೊದಲು ನಿಯಮಾನುಸಾರ ವಾಹನ ನಿಲುಗಡೆಗೆ ಅಗತ್ಯವಾದ ಜಾಗ ಹಾಗೂ ಪಾಕಿರ್ಂಗ್ ವ್ಯವಸ್ಥೆ ಇರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ವಿಶೇಷವಾಗಿ ಶಾಪಿಂಗ್ ಮಾಲ್ಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಪಾಕಿರ್ಂಗ್ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳ ವಿರುದ್ಧ ಪರೀಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಕುಂಭಕರ್ಣ ನಿದ್ರೆಯಲ್ಲಿರುವಂತೆ ವರ್ತಿಸುತ್ತಿರುವುದು ಏಕೆ? ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ಅಧಿಕಾರಿಗಳಿಗೆ ಕಾಣಿಸು ತ್ತಿಲ್ಲವೇ? ಈ ಸಮಸ್ಯೆಗೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತವೇ ನೇರ ಹೊಣೆಗಾರರನ್ನಾಗಿಸಬೇಕು, ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಗಮನಹರಿಸಿ, ಕಲಬುರಗಿ ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸಮಗ್ರ ಯೋಜನೆ ರೂಪಿಸಬೇಕು. ಪಾಕಿರ್ಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳ ಕುರಿತು ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘಿಸಿದ ಕಟ್ಟಡ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ಕೂಡಲೇ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ತಿಂಗಳೋಳಗೆ ಪಾಕಿರ್ಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ, ಸಾರ್ವಜನಿಕರನ್ನು ಸಂಘಟಿಸಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜೈ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ದೇವಿಂದ್ರ ದೇಸಾಯಿ ಕಲ್ಲೂರ ಅವರು ಎಚ್ಚರಿಕೆ ನೀಡಿದ್ದಾರೆ.























