
ವಿಜಯಪುರ, ಅ.16: ನ.1ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚಿಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ನಾಡು-ನುಡಿ, ಕಲೆ, ಸಂಸ್ಕøತಿ, ಇತಿಹಾಸ ಹಾಗೂ ಸಾಹಿತ್ಯದ ಹಿರಿಮೆಯನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲು ನಿರ್ಧರಿಸಲಾಯಿತು.
ನ.1ರಂದು ಬೆಳಿಗ್ಗೆ 7.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭುವನೇಶ್ವರಿ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ವಿವಿಧ ಇಲಾಖೆಗಳ ಸ್ಥಬ್ಧಚಿತ್ರಗಳು ಹಾಗೂ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ನಗರದ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾ ಕ್ರೀಡಾಂಗಣ ತಲುಪಲಿವೆ. ಕೃಷಿ, ತೋಟಗಾರಿಕೆ, ಅರಣ್ಯ ಸಂರಕ್ಷಣೆ, ಸ್ವಚ್ಛತೆ, ಶಕ್ತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಯುವನಿಧಿ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಸ್ಥಬ್ಧಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿವೆ.
ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಹಾಗೂ ವಿದ್ಯುತ್ ದೀಪಾಲಂಕಾರ ಕೈಗೊಳ್ಳುವಂತೆ ಸೂಚಿಸಲಾಯಿತು. ವೇದಿಕೆ, ಆಸನ, ಕುಡಿಯುವ ನೀರು, ಆಹ್ವಾನ ಪತ್ರಿಕೆ, ಗಣ್ಯರ ಆಹ್ವಾನ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪೆÇಲೀಸ್ ಪಡೆ, ಹೋಂಗಾಡ್ರ್ಸ್, ಸೈನಿಕ ಶಾಲೆ, ಎನ್ಸಿಸಿ, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಕವಾಯತಿನಲ್ಲಿ ಪಾಲ್ಗೊಳ್ಳಲಿವೆ. ವೈದ್ಯಕೀಯ ತಂಡ, ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಲಾಗುವುದು.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ
ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ ಕನ್ನಡ ನಾಡು-ನುಡಿ ಹಾಗೂ ನಾಡಿನ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲು ನಿರ್ಧರಿಸಲಾಗಿದೆ.
ಇದೇ ವೇಳೆ ಕನ್ನಡ ನಾಮಫಲಕ ಅಳವಡಿಕೆ ಕುರಿತು ಜಾಗೃತಿ ಅಭಿಯಾನ ನಡೆಸಲು ಸಭೆ ತೀರ್ಮಾನಿಸಿತು.
ಸಭೆಯಲ್ಲಿ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್. ಸಂತೋಷಕುಮಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.























