
ಅಫಜಲಪುರ:ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ೫೫ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ,ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್, ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶ ಹೊರಡಿಸಿದೆ.ವಸತಿ ಶಾಲೆಯ ಮಕ್ಕಳ ಆರೋಗ್ಯ ಮತ್ತು ಆಹಾರದ ಗುಣಮಟ್ಟವನ್ನು ಕಾಪಾಡುವುದು ಈ ಅಧಿಕಾರಿಗಳ ಆದ್ಯ ಕರ್ತವ್ಯವಾಗಿತ್ತು.ಆದರೆ ಇವರ ತೀವ್ರ ನಿರ್ಲಕ್ಷ್ಯದಿಂದಾಗಿ ಶಾಲೆಯ ೫೫ ಮಕ್ಕಳು ಒಮ್ಮೆಗೆ ಅಸ್ವಸ್ಥರಾಗುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಮೇಲ್ನೋಟಕ್ಕೇ ಇವರ ಕರ್ತವ್ಯ ನಿರ್ಲಕ್ಷ ಎದ್ದು ಕಾಣುತ್ತಿರುವುದರಿಂದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-೧೯೫೭ರ ನಿಯಮ ೧೦ (೧) (ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ವಿನಿಯಮಗಳು-೨೦೨೫ ರ ಅನ್ವಯ, ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಾದ ಶಿವಸ್ವಾಮಿ ಬಿ (ಕೆ.ಎ.ಎಸ್) ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.






























