
ನವದೆಹಲಿ,ಸೆ೨: ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ ೧೦೦ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.
ಇತ್ತೀಚಿಗೆ ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ ೧೦ ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಂಟಾದ ಸರಣಿ ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದಾಗಿ ೬೯ ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು ನಾಶವಾಗಿ ಪ್ರಾಣಿಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಸದ್ಯ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ.
ಕಳೆದ ಹದಿನೈದು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದಾಗಿ ೫೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಜಮ್ಮು-ಶ್ರೀನಗರ ಹೆದ್ದಾರಿ ಕಳೆದ ಎಂಟು ದಿನಗಳಿಂದ ಬಂದ್ ಆಗಿದೆ. ನಿರಂತರ ಮಳೆಯ ನಂತರ ರಾಜೌರಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಧಿಕಾರಿಗಳು ೧೯ ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಇನ್ನೂ ದೋಡಾದಲ್ಲಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ೫೦೦ ಮನೆಗಳಿಗೆ ಹಾನಿಯಾಗಿದೆ.
ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ಸೇರಿದಂತೆ ವಾಯುವ್ಯ ಭಾರತದಲ್ಲಿ ಸೆ.೭ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ (ಸೆ.೨) ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರಾಖಂಡ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಭಾರತದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾದ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಮೀಸಲಾದ ಪ್ಯಾಕೇಜ್‌ನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.