
ಆಳಂದ:ಜೂ.27: ಜನವಿರೋಧಿ ವಿದ್ಯುತ್ ಖಾಸಗೀಕರಣ ನೀತಿಯನ್ನು ತಕ್ಷಣ ಹಿಂಪಡೆಯಬೇಕು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಬರಗಾಲ ಘೋಷಣೆ ಮಾಡಬೇಕು ಹಾಗೂ ಅಸಂಘಟಿತ ಕೃಷಿ ಕೂಲಿ ಕಾರ್ಮಿಕರು ಮತ್ತು ದಿನಗೂಲಿ ನೌಕರರ ವೇತನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಭಾರತೀಯ ಕ್ಷೇತ್ರ ಮಜದೂರ ಯೂನಿಯನ್ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು ಬಳಿಕ ತಹಸೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ಭೀಮಶಂಕರ ಮಾಡಿಯಾಳ, ಪ್ರಸ್ತುತ ದಿನಗಳಲ್ಲಿ ವಿದ್ಯುತ್ ಖಾಸಗೀಕರಣದಿಂದ ಜನಸಾಮಾನ್ಯರು ಮತ್ತು ರೈತರು ಸಾಕಷ್ಟು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈಗಾಗಲೇ ಬೆಳೆ ನಷ್ಟ, ಸಾಲದ ಹೊರೆ ಮತ್ತು ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ವಿದ್ಯುತ್ ಖಾಸಗೀಕರಣ ಮತ್ತಷ್ಟು ಹೊರೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಳೆದ ವರ್ಷ ಅತಿವೃಷ್ಟಿಯಿಂದ ಹಾಗೂ ಈ ವರ್ಷ ಮಳೆಯ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಬರಗಾಲ ಘೋಷಿಸಿ ರೈತರ ಬ್ಯಾಂಕ್ ಸಾಲ ಮನ್ನಾ ಮಾಡಬೇಕು ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ವಿದ್ಯುತ್ ಬಿಲ್ ಪಾವತಿಸಲು ಸಹ ರೈತರು ಪರದಾಡುತ್ತಿರುವ ಸಂದರ್ಭದಲ್ಲಿ ಖಾಸಗೀಕರಣ ಜಾರಿಗೆ ತರುವುದು ರೈತ ವಿರೋಧಿ ಕ್ರಮವಾಗಿದ್ದು, ಅದನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಮನವಿಯಲ್ಲಿ ವಿದ್ಯುತ್ ಖಾಸಗೀಕರಣವನ್ನು ತಕ್ಷಣ ನಿಲ್ಲಿಸುವುದು, 2025-26ನೇ ಸಾಲಿನ ರೈತರ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡುವುದು, ಅಸಂಘಟಿತ ಕೃಷಿ ಕೂಲಿ ಕಾರ್ಮಿಕರು ಹಾಗೂ ದಿನಗೂಲಿ ನೌಕರರ ವೇತನವನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿರಿಸಲಾಗಿದೆ.
ಇದೇ ವೇಳೆ ಆಳಂದ ತಾಲೂಕಿನ ಜಲ್ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ದೊರೆಯುತ್ತಿಲ್ಲ. ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಎರಡು ತಿಂಗಳಿನಿಂದ ಸತ್ಯಾಗ್ರಹ ನಡೆಸಿದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಬೇಡಿಕೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಿಸಾನ್ ಸಭಾ ತಾಲೂಕ ಅಧ್ಯಕ್ಷ, ಧರ್ಮಣ್ಣ ಪೂಜಾರಿ, ಕಾರ್ಯಧ್ಯಕ್ಷ ಮಹಾದೇವ ಮಂಟಗಿ, ರೈತ ಕಲ್ಯಾಣಿ ಆವಟೆ ವೈಜನಾಥ್ ಬುರಾಣಿ ಪುರೆ ಕಲ್ಯಾಣಿ ತಡಕಲ್ ಆಸ್ಪಾಕ್ ಮುಲ್ಲಾ ದತ್ತಾತ್ರೇ ಕಬಾಡಿ ನಗರ ಕಾರ್ಯದರ್ಶಿ ಸಾಜಿದರ್ ಅಲಿ ಕುಮಾರ್ ಬಿರಾಜದಾರ್ ಕೊರಳ್ಳಿ ಕಲ್ ಶೆಟ್ಟಿ ಸೇರಿದಂತೆ ಕಿಸಾನ್ ಸಭಾ ಮತ್ತು ಮಜದೂರ ಯೂನಿಯನ್‍ನ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




















