
ಚಿಂಚೋಳಿ: ಕರ್ನಾಟಕ ರಾಜ್ಯೋತ್ಸವದಂದೇ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಬಾರಿ ತೀವ್ರವಾಗಿ ಖಂಡಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಅವರು, ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ಮಾಡಿರುವುದು ಬಡವರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ 1ರಿಂದ ಅನ್ವಯವಾಗುವಂತೆ ನಂದಿನಿ ನೀಲಿ ಪ್ಯಾಕೆಟ್ ಹಾಲಿನ ದರವನ್ನು ಪ್ರತಿ ಲೀಟರ್ಗೆ 46ರಿಂದ 54ಕ್ಕೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಪ್ರತಿನಿತ್ಯ ಹಾಲು ಖರೀದಿಸುವ ಸಾಮಾನ್ಯ ಕುಟುಂಬಗಳ ಮಾಸಿಕ ವೆಚ್ಚ ಗಣನೀಯವಾಗಿ ಹೆಚ್ಚಾಗಲಿದೆ. ದಿನಕ್ಕೆ ಒಂದು ಲೀಟರ್ ಹಾಲು ಖರೀದಿಸುವ ಕುಟುಂಬಕ್ಕೆ ತಿಂಗಳಿಗೆ ಸುಮಾರು 240 ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
ರೈತರ ಹಿತದ ಹೆಸರಿನಲ್ಲಿ ಜನಸಾಮಾನ್ಯರಿಗೆ ಹೊರೆ ಏಕೆ?
ಬಿಜೆಪಿ ರೈತರ ಹಿತಾಸಕ್ತಿಗೆ ಬದ್ಧವಾಗಿದೆ. ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ದೊರೆಯಬೇಕು ಎಂಬುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ರೈತರಿಗೆ ನೆರವು ನೀಡುವ ನೆಪದಲ್ಲಿ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ಅದರ ಹೊರೆಯನ್ನು ನೇರವಾಗಿ ಗ್ರಾಹಕರ ಮೇಲೆ ಹಾಕುವುದು ಸರಿಯಲ್ಲ ಎಂದು ಕೆ.ಎಂ. ಬಾರಿ ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹಾಲಿನ ದರ ಹೆಚ್ಚಳ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ. ರಾಜ್ಯೋತ್ಸವದಂತಹ ಮಹತ್ವದ ದಿನದಂದೇ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಹಾಲಿನ ದರ ಏರಿಕೆ ನಿರ್ಧಾರವನ್ನು ಹಿಂಪಡೆದು, ಹಾಲು ಉತ್ಪಾದಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಗ್ರಾಹಕರಿಗೂ ಹೊರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಬಾರಿ ಆಗ್ರಹಿಸಿದ್ದಾರೆ.



















