
ಬೆಂಗಳೂರು, ಜೂ. ೨೧- ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸಾರಥಿಯಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಇಂದು ಪದಗ್ರಹಣ ಮಾಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷದ ಅಧ್ಯಕ್ಷಗಿರಿಯ ಜವಾಬ್ದಾರಿಯನ್ನು ಹಸ್ತಾಂತರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದರು ಹಾಗೂ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಿ.ಕೆ. ಹರಿಪ್ರಸಾದ್ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡರು.
ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ
ಈ ಸಮಾವೇಶದಲ್ಲಿ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಂಕಲ್ಪವನ್ನು ತೊಡಲಾಯಿತು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ೩ ವರ್ಷಗಳಲ್ಲಿ ಗ್ಯಾರಂಟಿ ಯೋಜನೆ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕ ಉತ್ತಮ ಆಡಳಿತ ನೀಡಿದೆ. ಮುಂದೆಯೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿಕೊಂಡು ಜನಪರ ಜನಕಲ್ಯಾಣ ಯೋಜನೆಗಳನ್ನು ಜಾರಿ ಮಾಡಿ ೨೦೨೮ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಶಪಥವನ್ನು ಕಾಂಗ್ರೆಸ್ ನಾಯಕರು ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾಡಿದರು.
ಜನವೋ ಜನ..
ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಎಲ್ಲಿ ನೋಡಿದರೂ ಕಾಂಗ್ರೆಸ್ ಪಕ್ಷದ ಬಾವುಟಗಳು, ನಾಯಕರುಗಳಿಗೆ ಅಭಿನಂದಿಸುವ ಪೋಸ್ಟರ್, ಪ್ಲೆಕ್ಸ್, ಬ್ಯಾನರ್‌ಗಳದ್ದೇ ಕಾರುಬಾರು. ಇಡೀ ಅರಮನೆ ಮೈದಾನದ ಕಾಂಗ್ರೆಸ್ ಮಯವಾಗಿತ್ತು.
ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ರಾಜ್ಯದ ಎಲ್ಲೆಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದು, ಇಡೀ ಅರಮನೆ ಮೈದಾನ ಕಾಂಗ್ರೆಸ್ ಕಾರ್ಯಕರ್ತರಿಂದ ತುಂಬಿ ತುಳುಕಿತು.
ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗಿಯಾಗಿದ್ದರು. ಬಂದ ಕಾರ್ಯಕರ್ತರಿಗೆಲ್ಲಾ ಉಪಹಾರ, ಊಟ, ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು.
ಕಾರ್ಯಕ್ರಮದ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.




























