
ಸುರಪುರ: ಸಮಾಜದ ಕಟ್ಟಕಡೆಯ ಬಡವರು ಹಾಗೂ ಜನಸಾಮಾನ್ಯರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಸುರಪುರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ನೂತನ ಪ್ರಜಾ ಸೇವಾ ಇಲಾಖೆಯ ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಅವರ ಹೊಸ ಕಲ್ಪನೆಯಂತೆ ನೂತನ ಪ್ರಜಾ ಸೇವಾ ಇಲಾಖೆಯನ್ನು ಆರಂಭಿಸಲಾಗಿದ್ದು, ವಿಶೇಷವಾಗಿ ಬಡವರು ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ರಾಜ್ಯಾದ್ಯಂತ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಿಲ್ಲೆಗಳ ತಾಲೂಕು ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಜಾ ಸೇವಾ ಅಭಿಯಾನ ನಡೆಯಲಿದೆ. ಸಾರ್ವಜನಿಕರು ನಿಗದಿತ ತಾಲೂಕು ಕೇಂದ್ರಗಳಿಗೆ ತೆರಳಿ ತಮ್ಮ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಇತರ ಶನಿವಾರಗಳಲ್ಲಿ ಹೋಬಳಿ ಮಟ್ಟದಲ್ಲಿಯೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಜನಸ್ನೇಹಿ ಸರ್ಕಾರವಾಗಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ ಪರ ಬದ್ಧತೆಯನ್ನು ಸರ್ಕಾರ ಪ್ರದರ್ಶಿಸಿದೆ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಪ್ರಜಾ ಸೇವಾ ಇಲಾಖೆಯನ್ನು ಆರಂಭಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದು ಸಚಿವರು ಹೇಳಿದರು.
ಸಮಾಜದ ಕಟ್ಟಕಡೆಯ ಬಡ ವರ್ಗದ ಜನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವ ಉದ್ದೇಶದಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಈ ಅಭಿಯಾನ ಆರಂಭಿಸಲಾಗಿದೆ. ಜನರ ಸೇವೆಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ಹೇಳಿದರು.
ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ: ಶಾಸಕ ರಾಜಾ ವೇಣುಗೋಪಾಲ್ ನಾಯಕ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಕಾಳಜಿಯಿಂದ ರಾಜ್ಯಾದ್ಯಂತ ಪ್ರಜಾ ಸೇವಾ ನೂತನ ಇಲಾಖೆ ಆರಂಭಿಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುತ್ತಿದೆ ಎಂದರು.
ಜನರು ತಮ್ಮ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಪ್ರತಿ ಶನಿವಾರ ನಡೆಯುವ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಸಚಿವರು ಹಾಗೂ ಶಾಸಕರು ಸದಾ ಜನರೊಂದಿಗೆ ಇದ್ದು, ಬಡವರ ಪರವಾಗಿ ಕೆಲಸ ಮಾಡುವ ಸರ್ಕಾರ ನಮ್ಮದಾಗಿದೆ. ಸುರಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಈ ಅಭಿಯಾನ ಹಮ್ಮಿಕೊಂಡಿರುವುದು ಸಂತಸ ತಂದಿದೆ. ಜನರ ಸೇವೆಗೆ ಹಗಲಿರುಳು ಬದ್ಧರಾಗಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪೂರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ್, ಸುರಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೆದಾರ್, ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





























