ತುಮಕೂರು, ಸೆ. ೬- ಸಮಾಜದಲ್ಲಿನ ಎಲ್ಲ ಸಮಸ್ಯೆಗಳಿಗೂ ಕಾನೂನಿನಲ್ಲಿ ಪರಿಹಾರ ಸಿಗುವುದಿಲ್ಲ. ಮನುಷ್ಯನ ನಡವಳಿಕೆ, ವರ್ತನೆ, ಸದ್ಗುಣಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಜಯಂತ ಕುಮಾರ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪ್ರಕೃತಿ ಫೌಂಡೇಶನ್ ಸಂಯುಕ್ತಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ಸಂವಿಧಾನ ಕ್ಲಬ್ ೨೦೨೫-೨೬ ಕುರಿತು ವಸತಿ ಶಾಲೆಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಕಾನೂನು ಜಾಗೃತಿಯನ್ನು ಮೂಡಿಸಬೇಕು. ಚಿಕ್ಕಂದಿನಿಂದಲೇ ಅವರಿಗೆ ಶಿಸ್ತು, ಸಂಯಮ, ಶಿಷ್ಟಾಚಾರವನ್ನು ಕಲಿಸಬೇಕು. ಮಕ್ಕಳ ಮುಂದಿನ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದರು.
ವಿದ್ಯಾರ್ಥಿಗಳ ಮನಸ್ಥಿತಿಯನ್ನು ಉತ್ತಮ ರೀತಿಯಲ್ಲಿ ಬದಲಾಯಿಸಿ ಏಕೆಂದರೆ ಅವರು ನಾಳೆಯ ಭವಿಷ್ಯವಾಗಿದ್ದಾರೆ. ಮನೋಭಾವ, ನಡವಳಿಕೆ, ಮನಸ್ಥಿತಿಯು ಸಮಸ್ಯೆಗಳನ್ನು ವಿಶ್ಲೇಷಿಸುವ ವಿಧಾನವನ್ನು ಬದಲಾಯಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ಪರಶುರಾಮ ಕೆ.ಜಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಎಸ್. ಸಿದ್ದರಾಮಣ್ಣ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಂಯೋಜಕ ಜಗದೀಶ ಕಣಕಾಲ, ಪ್ರಕೃತಿ ಫೌಂಡೇಶನ್‌ನ ಕಾರ್ಯಕಾರಿ ನಿರ್ದೇಶಕ ರಂಗಪ್ಪ ಎನ್.ಎಸ್. ಮತ್ತಿತರರು ಭಾಗವಹಿಸಿದ್ದರು.

































