Home Lead News ರಕ್ಷಣೆಗಾಗಿ ವಕೀಲರ ಪ್ರತಿಭಟನೆ

ರಕ್ಷಣೆಗಾಗಿ ವಕೀಲರ ಪ್ರತಿಭಟನೆ

ಬೆಂಗಳೂರು,ನ.೩- ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದನ್ನು ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವಕೀಲರು ಇಂದು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಕೀಲರ ವೃತ್ತಿಪರ ಸುರಕ್ಷತೆ ಮತ್ತು ಜೀವ ರಕ್ಷಣೆಗೆ ಸಮರ್ಪಕ ಕಾನೂನು ರೂಪಿಸುವಂತೆ ಒತ್ತಾಯಿಸಿ ಬೆಂಗಳೂರು ವಕೀಲರ ಸಂಘ ಈ ಪ್ರತಿಭಟನೆಗೆ ಕರೆ ನೀಡಿತ್ತು. ರಾಜ್ಯಾದ್ಯಂತ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ತಮ್ಮ ಪ್ರತಿಭಟನೆ ನಡೆಸಿದರು. ಇದರಿಂದ ವಿವಿಧ ನ್ಯಾಯಾಲಯಗಳಲ್ಲಿನ ದೈನಂದಿನ ನ್ಯಾಯಾಂಗ ಚಟುವಟಿಕೆಗಳಿಗೆ ವ್ಯತ್ಯಯ ಉಂಟಾಯಿತು.

ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆಯೇ ಮಾರಣಾಂತಿಕ ಹಲ್ಲೆಗಳು ನಡೆಯುತ್ತಿರುವುದು ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಹೋರಾಡಬೇಕಾದ ವಕೀಲರೇ ತಮ್ಮ ಜೀವದ ಸುರಕ್ಷತೆಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಕೀಲ ಸಮುದಾಯದ ಆಕ್ರೋಶಕ್ಕೆ ವ್ಯಕ್ತಪಡಿಸಿದರು.

ಮೂವರು ವಕೀಲರ ಮೇಲಿನ ದೌರ್ಜನ್ಯ ಪ್ರಮುಖ ಕಾರಣ
ವೈಟ್‌ಫೀಲ್ಡ್‌ನ ವಕೀಲ ಮಂಜುನಾಥ್ ಹಾಗೂ ಅನ್ನಪೂರ್ಣೇಶ್ವರಿ ನಗರದ ವಕೀಲ ಶ್ರೀರಾಮ್ ಅವರ ಬರ್ಬರ ಹತ್ಯೆ ಪ್ರಕರಣಗಳು ವಕೀಲ ಸಮುದಾಯವನ್ನು ಬೆಚ್ಚಿಬೀಳಿಸಿವೆ. ಇದೇ ವೇಳೆ ಗೌರಿಬಿದನೂರಿನ ವಕೀಲ ವೆಂಕಟರಮಣ ಸಣ್ಣಕ್ಕಿ ಅವರ ಮೇಲೆ ನಡೆದ ಕೊಲೆ ಯತ್ನ ಪ್ರಕರಣವೂ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.ವಕೀಲರು ತಮ್ಮ ವೃತ್ತಿಯ ಭಾಗವಾಗಿ ವಿವಿಧ ಪ್ರಕರಣಗಳಲ್ಲಿ ಕಕ್ಷಿದಾರರ ಪರವಾಗಿ ವಾದ ಮಂಡಿಸುತ್ತಾರೆ. ಈ ಸಂದರ್ಭದಲ್ಲಿ ವೈಯಕ್ತಿಕ ದ್ವೇಷ, ಪ್ರಕರಣಗಳಿಗೆ ಸಂಬಂಧಿಸಿದ ವಿವಾದಗಳು ಹಾಗೂ ಇತರ ಕಾರಣಗಳಿಂದ ಬೆದರಿಕೆ ಮತ್ತು ಹಲ್ಲೆಗಳಿಗೆ ಗುರಿಯಾಗುವ ಅಪಾಯ ಎದುರಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ವಕೀಲರಿಗೆ ತಕ್ಷಣದ ರಕ್ಷಣೆ ಮತ್ತು ಸಂತ್ರಸ್ತರಿಗೆ ನ್ಯಾಯ ದೊರಕಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿಲ್ಲ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದರು,

ವಕೀಲರ ಮೇಲಿನ ದೌರ್ಜನ್ಯಗಳು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದಾಳಿಯಲ್ಲ; ನ್ಯಾಯದಾನ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ವಕೀಲ ಸಮುದಾಯದ ಸ್ವಾತಂತ್ರ್ಯ ಮತ್ತು ಸುರಕ್ಷತೆಯ ಮೇಲಿನ ದಾಳಿ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ವಕೀಲರು ಯಾವುದೇ ಭಯ, ಒತ್ತಡ ಅಥವಾ ಬೆದರಿಕೆಯಿಲ್ಲದೆ ತಮ್ಮ ವೃತ್ತಿಯನ್ನು ನಿರ್ವಹಿಸುವ ವಾತಾವರಣ ನಿರ್ಮಾಣವಾಗಬೇಕು ಎಂಬುದು ಪ್ರತಿಭಟನೆಯ ಮುಖ್ಯ ಉದ್ದೇಶವಾಗಿತ್ತು

ರಕ್ಷಣಾ ಕಾಯ್ದೆ ಬಲಪಡಿಸಲು ಆಗ್ರಹ
ಅಕ್ಟೋಬರ್ ೨೯, ೨೦೨೬ರಂದು ನಡೆದ ವಕೀಲರ ಸಂಘ ಸಾಮಾನ್ಯ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಾಗಿದೆ. ವಕೀಲರ ರಕ್ಷಣಾ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ವಕೀಲರ ಮೇಲೆ ಹಲ್ಲೆ ನಡೆಸುವವರು ಹಾಗೂ ಕೊಲೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಕೀಲರಿಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪೊಲೀಸ್ ರಕ್ಷಣೆ ಒದಗಿಸಬೇಕು. ವೃತ್ತಿ ನಿರ್ವಹಿಸುವ ಸಂದರ್ಭದಲ್ಲಿ ಎದುರಾಗುವ ಬೆದರಿಕೆಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ರೂಪಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಡನೆ ಮೂಲಕ ಒತ್ತಾಯಿಸಲಾಯಿತು,
ರಾಜ್ಯದ ಎಲ್ಲ ವಕೀಲರ ಸಂಘಗಳು ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಎಎಬಿ ಅಧ್ಯಕ್ಷ ವಿವೇಕ್ ಸುಬ್ಬ ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ವಿ. ಪ್ರವೀಣ್ ಗೌಡ ಮನವಿ ಮಾಡಿದರು,

ವಕೀಲರ ಸುರಕ್ಷತೆ ಖಚಿತಪಡಿಸುವವರೆಗೆ ಹೋರಾಟ
ವಕೀಲರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು, ಅವರ ಸುರಕ್ಷತೆಯೇ ನ್ಯಾಯದಾನ ಪ್ರಕ್ರಿಯೆಯ ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾಗಿದೆ. ವಕೀಲರ ಮೇಲಿನ ದಾಳಿಗಳಿಗೆ ಕಡಿವಾಣ ಹಾಕಲು ಕೇವಲ ಖಂಡನೆ ಅಥವಾ ಭರವಸೆಗಳು ಸಾಕಾಗುವುದಿಲ್ಲ. ನಿರ್ದಿಷ್ಟ ಕಾನೂನು, ತ್ವರಿತ ತನಿಖೆ, ತಪ್ಪಿತಸ್ಥರಿಗೆ ಶಿಕ್ಷೆ ಹಾಗೂ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ದೊರೆಯಬೇಕು ಎಂಬುದು ವಕೀಲ ಸಮುದಾಯ ಆಕ್ರೋಶ ವ್ಯಕ್ತಪಡಿಸಿ ಒತ್ತಾಯಿಸಿದರು.

ನವೆಂಬರ್ ೩ರ ಕಲಾಪ ಬಹಿಷ್ಕಾರವನ್ನು ಸರ್ಕಾರದ ಗಮನ ಸೆಳೆಯುವ ಪ್ರಮುಖ ಹೋರಾಟದ ಭಾಗವಾಗಿ ಪರಿಗಣಿಸಲಾಗಿದ್ದು, ವಕೀಲರ ರಕ್ಷಣೆಗೆ ಸಂಬಂಧಿಸಿದ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.