Home ಜಿಲ್ಲೆ ವಕೀಲರ ಸೇವೆ ಪ್ರಾಮಾಣಿಕ ಹಾಗೂ ಉತ್ಕೃಷ್ಟ: ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ

ವಕೀಲರ ಸೇವೆ ಪ್ರಾಮಾಣಿಕ ಹಾಗೂ ಉತ್ಕೃಷ್ಟ: ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ

ಯಾದಗಿರಿ:ಮೇ.೩೧:ವಕೀಲ ವೃತ್ತಿ ಸಮಾಜ ಸೇವೆಯೊಂದಿಗೆ ನಿಕಟ ಸಂಬAಧ ಹೊಂದಿದ್ದು, ದೇಶ ನಿರ್ಮಾಣದಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಮಹನೀಯರು ವಕೀಲರಾಗಿ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಆದ್ದರಿಂದ ವಕೀಲರ ಸೇವೆ ಪ್ರಾಮಾಣಿಕ ಹಾಗೂ ಉತ್ಕೃಷ್ಟ ಸೇವೆಯಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

ಶನಿವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಕಲ್ಯಾಣ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಯಾದಗಿರಿ ಹಾಗೂ ಶಹಾಪುರ ಮತ್ತು ಶೋರಾಪುರ ತಾಲೂಕು ನ್ಯಾಯವಾದಿಗಳ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ೬ರಿಂದ ೧೪ ವರ್ಷದ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನುಬಾಹಿರವಾಗಿದ್ದು, ಅವರ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಇಚ್ಛೆಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಸಂವಿಧಾನ ನೀಡಿದೆ ಎಂದು ತಿಳಿಸಿದರು.

ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ವಕೀಲರಿಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂತಹ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಕೀಲರು ಕಾಯ್ದೆಯ ಕುರಿತು ಸಮಗ್ರ ಮಾಹಿತಿ ಪಡೆದು ಜನಸಾಮಾನ್ಯರಿಗೂ ತಿಳಿಸಬೇಕು ಎಂದು ಅವರು ಕರೆ ನೀಡಿದರು.

ಇನ್ನೂ ಒಂದು ವರ್ಷ ಲೋಕಾಯುಕ್ತ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಇರುವುದರಿಂದ ಜನರ ಅನುಕೂಲಕ್ಕಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ ಅವರು, ಸಮಾಜದಲ್ಲಿ ಭ್ರಷ್ಟಾಚಾರ ಇನ್ನೂ ದೊಡ್ಡ ಸವಾಲಾಗಿ ಉಳಿದಿದ್ದು, ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಮಾತನಾಡಿ, ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಜಿಲ್ಲೆಯಾದ್ಯಂತ ಮಿಂಚಿನ ಸಂಚಾರ ನಡೆಸುವ ಮೂಲಕ ಲೋಕಾಯುಕ್ತದ ಮಹತ್ವವನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ಯಾದಗಿರಿಯ ಹೊಸ ನ್ಯಾಯಾಲಯ ಕಟ್ಟಡದ ಜಾಗ ಮಂಜೂರಿಗೆ ಅವರ ಕೊಡುಗೆ ಗಮನಾರ್ಹವಾಗಿದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಎಸ್. ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ ಲೋಕಾಯುಕ್ತ ಫಣೀಂದ್ರ ಅವರು ಭ್ರಷ್ಟಾಚಾರ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದು, ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದಾರೆ. ಜಿಲ್ಲೆಯಲ್ಲಿ ಲೋಕಾಯುಕ್ತ ಸಂಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತರು ವಿಶೇಷಚೇತನರಿಗೆ ವಿವಿಧ ಸಾಧನ-ಸಲಕರಣೆಗಳನ್ನು ವಿತರಿಸಿ, ಬಳಿಕ ವಕೀಲರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ, ಜಿಲ್ಲಾ ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಶಹಾಪುರ ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಸಂತೋಷ, ಶೋರಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಹನೂರ್ ಬಸವರಾಜ ಸೇರಿದಂತೆ ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.