ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧ ಗಟ್ಟಿಗೊಳ್ಳಲಿ

ಕಲಬುರಗಿ:ಸೆ.5: ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ಅಪಾರವಾದ ಗೌರವ, ಭಕ್ತಿ, ಶೃದ್ಧೆಯಿತ್ತು. ಆಧುನೀಕರಣಕ್ಕೆ ಒಳಗಾಗಿ ಪ್ರಸ್ತುತ ಸನ್ನಿವೇಶಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧ ಸಡಿಲವಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಉಪನ್ಯಾಸಕ ಎಚ್.ಬಿ.ಪಾಟೀಲ್, ಇಂದು ಗುರು-ಶಿಷ್ಯರ ಸಂಬಂಧವಾಗಿದ್ದು ಗಟ್ಟಿಗೊಳ್ಳಬೇಕಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ’63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಶಿಕ್ಷಕ ವೃತ್ತಿ ಪವಿತ್ರವಾದದ್ದು. ಶಿಕ್ಷಕರಿಗೆ ನಿವೃತ್ತಿಯಿಲ್ಲ. ವಿದ್ಯಾರ್ಥಿಗಳಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ಅವರ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳು ಶಿಕ್ಷಕರಾಗಿದ್ದಾರೆ. ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಮತ್ತು ಶಿಕ್ಷಕರ ಕೊಡುಗೆಯನ್ನು ಸ್ಮರಿಸುವ ದಿನ ಇದಾಗಿದೆ. ನೈತಿಕ ಮೌಲ್ಯಗಳ ಪ್ರೋತ್ಸಾಹ, ಸಕಾರಾತ್ಮಕ ಕಲಿಕೆಯ ವಾತಾವರಣ, ಸಮಾಜದಲ್ಲಿ ಶಿಕ್ಷಕರ ಸ್ಥಾನಮಾನದ ಅವಲೋಕನ ಮಾಡುವುದು ದಿನಾಚರಣೆಯ ಹಿನ್ನಲೆಯಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಶಿಕ್ಷಕರ ಮೇಲೆ ಗುರುತರ ಜವಾಬ್ದಾರಿಯಿದ್ದು, ಅದನ್ನು ಕರ್ತವ್ಯ ಬದ್ಧತೆಯಿಂದ ಮಾಡುವ ಮೂಲಕ ಶಿಕ್ಷಕ, ಗುರುವಾಗಬೇಕಾಗಿದೆ ಎಂದು ಮಾರ್ಮಿಕವಾಗಇ ನುಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಸ್ನೇಹಾ ಚವ್ಹಾಣ, ಮುಸ್ಕಾನ್ ಶೇಖ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.