Home ಜಿಲ್ಲೆ ಸ್ಟಿಂಗ್ ಆಪರೇಷನ್‌ಗಳ ಸತ್ಯ ಬಯಲಾಗಲಿ, ಸಿಬಿಐ ತನಿಖೆಗೆ ವಹಿಸಿ: ಛಲವಾದಿ ನಾರಾಯಣಸ್ವಾಮಿ

ಸ್ಟಿಂಗ್ ಆಪರೇಷನ್‌ಗಳ ಸತ್ಯ ಬಯಲಾಗಲಿ, ಸಿಬಿಐ ತನಿಖೆಗೆ ವಹಿಸಿ: ಛಲವಾದಿ ನಾರಾಯಣಸ್ವಾಮಿ

ಸಂಜೆ ವಾಣಿ ವಾರ್ತೆ
ಯಾದಗಿರಿ: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ, ಜನರ ಮುಂದಿರುವ ಅನುಮಾನಗಳಿಗೆ ತೆರೆ ಎಳೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ, ದಲಿತ ಮೀಸಲಾತಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಕಾಂಗ್ರೆಸ್‌ನ ರಾಜಕೀಯ ನಿಲುವುಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಸ್ಟಿಂಗ್ ಆಪರೇಷನ್‌ಗಳ ಹಿಂದೆ ಯಾರಿದ್ದಾರೆ?
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್‌ಗಳ ಕುರಿತು ಸಾರ್ವಜನಿಕವಾಗಿ ಪ್ರಸ್ತಾಪಿಸಿರುವುದರಿಂದ ಈ ವಿಚಾರದ ಸತ್ಯಾಸತ್ಯತೆ ಬಹಿರಂಗಪಡಿಸುವ ಹೊಣೆಗಾರಿಕೆಯೂ ಸರ್ಕಾರದ ಮೇಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ತಮ್ಮ ಮೇಲೂ ಸ್ಟಿಂಗ್ ಆಪರೇಷನ್ ನಡೆಸಲು ಕೆಲವರು ಬಂದಿದ್ದರು ಎಂಬ ಮುಖ್ಯಮಂತ್ರಿ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ಅಂಥವರು ಯಾರು, ಯಾವ ಉದ್ದೇಶದಿಂದ ಕಾರ್ಯಾಚರಣೆ ನಡೆಸಲು ಮುಂದಾಗಿದ್ದರು ಹಾಗೂ ಇದರ ಹಿಂದೆ ಬ್ಲ್ಯಾಕ್‌ಮೇಲ್ ತಂತ್ರವಿದೆಯೇ ಎಂಬುದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು ಎಂದರು.
ಕಾAಗ್ರೆಸ್‌ನೊಳಗೆ ಸ್ಟಿಂಗ್ ಆಪರೇಷನ್‌ಗಳಿಗೆ ಸಂಬAಧಿಸಿದ ಆಡಿಯೊ ಮತ್ತು ವಿಡಿಯೊಗಳು ಸಿದ್ಧವಾಗುತ್ತಿವೆ ಎಂಬ ಆರೋಪಗಳ ಕುರಿತು ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಅವರ ಹೇಳಿಕೆಗಳನ್ನೂ ಪ್ರಸ್ತಾಪಿಸಿದರು.
ಆದರೆ, ಈ ಕಾರ್ಯಾಚರಣೆಗಳ ಹಿಂದೆ ಯಾರು ಇದ್ದಾರೆ ಎಂಬುದನ್ನು ಸೂಕ್ತ ತನಿಖೆಯೇ ನಿರ್ಧರಿಸಬೇಕು. ಯಾವುದೇ ವ್ಯಕ್ತಿಯ ವಿರುದ್ಧ ಆಧಾರವಿಲ್ಲದೆ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಸ್ವತಂತ್ರ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯೂ ಹೆಚ್ಚುತ್ತಿದೆ ಎಂದು ಅವರು ಹೇಳಿದರು.
ಬರ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆ ನಡೆದ ಸಂದರ್ಭದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರ ನೀಡಬೇಕು ಹಾಗೂ ತಕ್ಷಣ ಕನಿಷ್ಠ ೧೦ ಸಾವಿರದ ಮೊದಲ ಕಂತು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೆವು ಎಂದರು.
ಈಗಿನ ಸರ್ಕಾರ ೨,೫೦೦ ಪರಿಹಾರ ಘೋಷಿಸಿದ್ದರೂ ರೈತರ ಖಾತೆಗಳಿಗೆ ಹಣ ಜಮೆಯಾಗಿಲ್ಲ ಎಂದು ಆರೋಪಿಸಿದ ಅವರು, ಕೇವಲ ಪರಿಹಾರ ಘೋಷಿಸುವುದರಿಂದ ರೈತರ ಸಮಸ್ಯೆ ಬಗೆಹರಿಯುವುದಿಲ್ಲ. ಘೋಷಿಸಿದ ಹಣವನ್ನು ತಕ್ಷಣ ರೈತರ ಖಾತೆಗಳಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೧ ಕೋಟಿ ಬಿಡುಗಡೆ ಮಾಡಿರುವುದಾಗಿ ಸರ್ಕಾರ ಹೇಳುತ್ತಿದ್ದರೂ, ಹಣ ಬಂದಿಲ್ಲ ಎಂದು ಶಾಸಕರೇ ಹೇಳುತ್ತಿದ್ದಾರೆ. ಹಾಗಾದರೆ ಹಣ ಎಲ್ಲಿ ಹೋಯಿತು ಎಂಬುದಕ್ಕೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದರು.
ರೈತರ ಆತ್ಮಹತ್ಯೆಗಳ ವರದಿಗಳು ಬರುತ್ತಿರುವ ಸಂದರ್ಭದಲ್ಲಿ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಆದ್ಯತೆ ನೀಡುವ ಬದಲು ಅನ್ನದಾತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯುತ್ತಾ ರೈತರನ್ನು ಸಂಕಷ್ಟದಲ್ಲಿಯೇ ಬಿಡಬಾರದು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಅಡಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ನಂತರ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ಅಡಿ ಕೇಂದ್ರದಿAದ ಬರಬೇಕಾದ ನೆರವಿಗಾಗಿ ಅಗತ್ಯ ಪ್ರಸ್ತಾವನೆ ಸಲ್ಲಿಸಬಹುದು ಎಂದರು.
ಕೇAದ್ರದ ತಂಡಗಳು ಪರಿಶೀಲನೆ ನಡೆಸಿ ವರದಿ ನೀಡುವವರೆಗೆ ರೈತರು ಕಾಯಬೇಕೇ ಎಂಬ ಪ್ರಶ್ನೆ ಎತ್ತಿದ ಅವರು, ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ನೆರವು ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ರಾಜ್ಯದ ವಿಶ್ವವಿದ್ಯಾಲಯಗಳ ಖಾತೆಗಳಲ್ಲಿರುವ ಹಣವನ್ನು ಸರ್ಕಾರಕ್ಕೆ ನೀಡುವಂತೆ ಪತ್ರ ಬರೆಯಲಾಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಿದ ಅವರು, ಬೆಳಗಾವಿಯ ವಿಶ್ವವಿದ್ಯಾಲಯವೊಂದರ ಖಾತೆಯಲ್ಲಿ ಸುಮಾರು ೮೦೦ ಕೋಟಿ ಇರುವುದಾಗಿ ಉಲ್ಲೇಖಿಸಿದರು.
ವಿಶ್ವವಿದ್ಯಾಲಯಗಳ ಹಣವನ್ನು ಸರ್ಕಾರಕ್ಕೆ ನೀಡುವಂತೆ ಕೇಳುವ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರಾಜ್ಯದ ಆರ್ಥಿಕ ನಿರ್ವಹಣೆ ಹಾಗೂ ಖರ್ಚು-ವೆಚ್ಚಗಳ ಕುರಿತು ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾತನಾಡಿದ ಅವರು, ಒಂದಕ್ಕಿAತ ಹೆಚ್ಚು ಕಡೆ ಹೆಸರು ಹೊಂದಿರುವವರು, ಸ್ಥಳಾಂತರಗೊAಡವರು ಹಾಗೂ ಅನರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಿ ಸೂಕ್ತ ತಿದ್ದುಪಡಿ ಮಾಡುವುದು ಅಗತ್ಯ ಎಂದರು.
ಭಾರತೀಯ ನಾಗರಿಕರಲ್ಲದವರಿಗೆ ಮತದಾನದ ಹಕ್ಕು ಇರಬಾರದು. ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಕಾನೂನುಬದ್ಧವಾಗಿ ಸರಿಪಡಿಸುವ ಪ್ರಕ್ರಿಯೆಯನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.
ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮತಗಳ್ಳತನದ ಆರೋಪಗಳನ್ನು ಮಾಡುವುದಾದರೆ ಸೂಕ್ತ ಸಾಕ್ಷ್ಯಗಳನ್ನು ಒದಗಿಸಬೇಕು ಎಂದರು.
ಕಾAಗ್ರೆಸ್ ತನ್ನ ಚುನಾವಣಾ ಸೋಲುಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಾಯಕತ್ವದ ವೈಫಲ್ಯಗಳ ಬಗ್ಗೆಯೂ ಪಕ್ಷದ ಮುಖಂಡರು ಚಿಂತನೆ ನಡೆಸಬೇಕು ಎಂದು ಟೀಕಿಸಿದರು.ನ್ಯಾಯಾಂಗವನ್ನು ರಾಜಕೀಯಕ್ಕೆ ಎಳೆಯಬಾರದು
ನ್ಯಾಯಾಂಗ ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಕುರಿತು ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸಮಸ್ಯೆಗಳಿದ್ದರೆ ನ್ಯಾಯಾಲಯದ ಕಾನೂನು ಪ್ರಕ್ರಿಯೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಪ್ರತಿಭಟನೆಗಳ ಮೂಲಕ ನ್ಯಾಯಾಂಗದ ಮೇಲೆ ರಾಜಕೀಯ ಒತ್ತಡ ಹೇರುವ ಪ್ರಯತ್ನ ಸರಿಯಲ್ಲ ಎಂದರು.
ಮುಖ್ಯಮAತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅವಮಾನವಾಗಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿ ಹುದ್ದೆ ರಾಜ್ಯವನ್ನು ಪ್ರತಿನಿಧಿಸುವ ಗೌರವಾನ್ವಿತ ಸ್ಥಾನವಾಗಿದೆ. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಅಥವಾ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.೧೫ರಿಂದ ಶೇ.೧೭ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.೩ರಿಂದ ಶೇ.೭ಕ್ಕೆ ಹೆಚ್ಚಿಸಲಾಗಿತ್ತು ಎಂದು ಹೇಳಿದರು.
ಮೀಸಲಾತಿ ವಿಚಾರದಲ್ಲಿ ನ್ಯಾಯಾಲಯದ ಮುಂದೆ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಕಾನೂನುಬದ್ಧ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಅಡಿ ಮೀಸಲಿಟ್ಟ ಅನುದಾನವನ್ನು ಆಯಾ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕು. ಈ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದರು.ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕೆ ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು.
ಮೊಬೈಲ್ ಉತ್ಪಾದನೆ, ವಾಹನೋದ್ಯಮ ಹಾಗೂ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳ ಮೂಲಕ ದೇಶದ ಉತ್ಪಾದನಾ ಸಾಮರ್ಥ್ಯ ಹೆಚ್ಚುತ್ತಿದೆ. ದೇಶದ ಆರ್ಥಿಕ ಪ್ರಗತಿ ಹಾಗೂ ಪ್ರತಿಷ್ಠೆಯ ವಿಚಾರದಲ್ಲಿ ರಾಜಕೀಯ ಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಬೆಲೆ ನಿಗದಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಹಿತ ರಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ ನಡೆಸಿ, ಸಂಬAಧಪಟ್ಟವರಿAದ ಮಾಹಿತಿ ಪಡೆದು ಪ್ರಧಾನಮಂತ್ರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಈ ಪ್ರಯತ್ನವನ್ನು ಸ್ವಾಗತಿಸುತ್ತೇನೆ ಎಂದರು.
ರೈತರ ಬಗ್ಗೆ ಮಾತನಾಡುವುದಷ್ಟೇ ಸಾಕಾಗುವುದಿಲ್ಲ; ಅವರ ಸಂಕಷ್ಟಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ, ವಿಭಾಗ ಸಹಪ್ರಭಾರಿ ಶರಣಪ್ಪ ತಳವಾರ, ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ನಾಗರತ್ನ ಕುಪ್ಪಿ, ದೇವಿಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಸಿದ್ದಣ್ಣಗೌಡ ಕಾಡಂನೊರ, ಸಿದ್ರಾಮರಡ್ಡಿ ಬಲಕಲ್, ಜಿಲ್ಲಾ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀಪುತ್ರ ಮಾಲಿಪಾಟೀಲ್, ಶರಣುಗೌಡ ಅಲಿಪುರ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಹಾಗೂ ಸಹ ಸಂಚಾಲಕ ಚಂದ್ರಶೇಖರ ಕಡೆಚೂರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.