Home ಜಿಲ್ಲೆ ಲಿಂಬಿಕಾಯಿ ಗೆಲುವು: ಕುನ್ನೂರ ವಿಶ್ವಾಸ

ಲಿಂಬಿಕಾಯಿ ಗೆಲುವು: ಕುನ್ನೂರ ವಿಶ್ವಾಸ

ಶಿಗ್ಗಾವಿ,ಅ೨೪: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಸಂಸದರಾದ ಮಂಜುನಾಥ ಕುನ್ನೂರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಅವರು ಶುಕ್ರವಾರ ಶಿಗ್ಗಾವಿ ನಗರದ ತಹಶೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.


ನಂತರ ಶಿಗ್ಗಾವಿ ಶಾಸಕ ಯಾಸಿರ್ ಖಾನ್ ಪಠಾಣ್ ಅವರನ್ನು ಭೇಟಿಯಾದ ಅವರು, ಶಾಸಕರೊಂದಿಗೆ ಮತಗಟ್ಟೆಗೆ ಭೇಟಿ ನೀಡಿ ಚುನಾವಣಾ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಮತದಾನದ ಪ್ರಗತಿ ಮತ್ತು ಮತದಾರರ ಸ್ಪಂದನೆಯ ಕುರಿತು ಚರ್ಚಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಅವರು, ಪದವೀಧರ ಮತದಾರರು ಅತ್ಯಂತ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿಪರ ಕಾರ್ಯಗಳು ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗೆ ಪೂರಕವಾಗಲಿವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.