Home ಜಿಲ್ಲೆ ತುಮಕೂರು ಮಧುಗಿರಿ: ೧೪ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ದತೆ

ಮಧುಗಿರಿ: ೧೪ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ದತೆ

ಮಧುಗಿರಿ, ಮಾ. ೭- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಎಂದು ತಹಶೀಲ್ದಾರ್ ಶ್ರೀನಿವಾಸ್ ಹೇಳಿದರು.


ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ದತೆಗಳ ಕುರಿತ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ತಾಲ್ಲೂಕಿನಲ್ಲಿ ೧೪ ಪರೀಕ್ಷಾ ಕೇಂದ್ರಗಳಿದ್ದು ಒಟ್ಟು ೩೦೨೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ ೨೦೪೦ ಬಾಲಕರು ಹಾಗೂ ೧೬೮೬ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.


ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಆರೋಗ್ಯ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಪರೀಕ್ಷೆಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡುವಂತೆ ಡಿಪೋ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಬೆಸ್ಕಾಂ ಇಲಾಖೆಯವರಿಗೂ ಸೂಚಿಸಲಾಗಿದೆ. ಮಕ್ಕಳಿಗೆ ಪೋಷಕರೂ ಸಹ ಆತ್ಮಸ್ಥೈರ್ಯ ತುಂಬಬೇಕು ಎಂದು ತಿಳಿಸಿದರು.


ಬಿಇಓ ಹನುಮಂತರಾಯಪ್ಪ ಮಾತನಾಡಿ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ನವರು ಸೂಚನೆ ನೀಡಿದ್ದು, ಈಗಾಗಲೇ ೩ ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿದ್ದು, ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ. ಮಾ. ೭ ರಂದು ಎಲ್ಲ ಶಾಲೆಗಳಲ್ಲಿ ನಡೆಯುವ ಮೆಗಾ ಪೋಷಕರ ಸಭೆಗೆ ಪೋಷಕರು ಹಾಜರಾಗಿ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಇದೇ ವೇಳೆ ಮನವಿ ಮಾಡಿದರು.


ಸಿಪಿಐ ಹನುಮಂತರಾಯಪ್ಪ ಮಾತನಾಡಿ, ತಾಲ್ಲೂಕಿನಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆ ಸಾಗುವ ಮಾರ್ಗದಲ್ಲಿ ಬಂದೋಬಸ್ತ್‌ಗೆ ಅಗತ್ಯ ಸಿಬ್ಬಂದಿ ನಿಯೋಜಿಸಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅಂಜದೆ ನಿರ್ಭೀತಿಯಿಂದ ಪರೀಕ್ಷೆ ಎದುರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾ.ಪಂ ಇಒ ಲಕ್ಷ್ಮಣ್, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಬಿಸಿಎಂ ಇಲಾಖೆಯ ಜಯರಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.