
ಕಲಬುರಗಿ,ಜೂ.25-ನಗರದ ವಿವಿಧ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 19 ಜನ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು 19 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ 8, ಅಶೋಕ ನಗರ ಪೊಲೀಸ್ ಠಾಣೆಯಲ್ಲಿ 5, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ 3, ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ 2, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿ ಒಟ್ಟು 19 ಪ್ರಕರಣಗಳಲ್ಲಿ 19 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದಲ್ಲಿ ನಡೆಯುವ ಅಪರಾಧ ಹಾಗೂ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಅವರ ನಿರ್ದೇಶನದಂತೆ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ಹೆಚ್.ನಾಯಕ್ ಅವರ ಮಾರ್ಗದರ್ಶನದಲ್ಲಿ ರಚಿಸಿದ್ದ ವಿವಿಧ ತಂಡಗಳು ನಗರದ ವಿವಿಧೆಡೆ ದಾಳಿ ನಡೆಸಿ ಗಾಂಜಾ ಸೇವನೆ ಮಾಡುತ್ತಿದ್ದ 19 ಜನರನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಈ ದಾಳಿಯನ್ನು ಯಶಸ್ವಿಯಾಗಿ ಕೈಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ.ಅವರು ಶ್ಲಾಘಿಸಿದ್ದಾರೆ.