ಔರಾದ್ : ಅ.೧೭:ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ನಾಳೆ ಅ.೧೮ ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಶಾಸಕ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಳೆ ಬೆಳಗ್ಗೆ ೧೦ ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ರ‍್ಯಾಲಿಯು ಎಪಿಎಂಸಿ ವೃತ್ತದಿಂದ ಆರಂಭಗೊAಡು ಕನ್ನಡಾಂಬೆ ವೃತ್ತ, ಬಸ್ ನಿಲ್ದಾಣದ ಮಾರ್ಗವಾಗಿ ಬಸವೇಶ್ವರ ವೃತ್ತದ ಹತ್ತಿರ ಸಮಾವೇಶಗೊಳ್ಳಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಿವರಾಜ ಅಲ್ಮಾಜೆ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಶೀಘ್ರ ಬೆಳೆ ಪರಿಹಾರ ಬಿಡುಗಡೆ ಮಾಡಿ ರೈತರ ನೋವುಗಳಿಗೆ ಸ್ಪಂದಿಸುವAತೆ ಸರ್ಕಾರವನ್ನು ಒತ್ತಾಯಿಸಲು ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪಕ್ಷದ ಮುಖಂಡರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಎಲ್ಲ ಬೂತ್‌ಗಳ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ರೈತ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕರು ಮನವಿ ಮಾಡಿದ್ದಾರೆ.
























