Home ಜಿಲ್ಲೆ ಕಲಬುರಗಿ ತಾಲ್ಲೂಕಿನ ಜನ ಯೋಜನೆಗಳಿಂದ ಆರ್ಥಿಕ ಸ್ವಾವಲಂಬಿಗಳಾಗಲಿ: ರಾಘವೇಂದ್ರ ಗುತ್ತೇದಾರ

ತಾಲ್ಲೂಕಿನ ಜನ ಯೋಜನೆಗಳಿಂದ ಆರ್ಥಿಕ ಸ್ವಾವಲಂಬಿಗಳಾಗಲಿ: ರಾಘವೇಂದ್ರ ಗುತ್ತೇದಾರ

ಕಾಳಗಿ: ಬಡವರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಈ ಯೋಜನೆಗಳ ಸದುಪಯೋಗ ಪಡೆದು ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ತಾಲ್ಲೂಕಿನಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಯೋಜನೆಗಳ ಪ್ರಗತಿ ಹಾಗೂ ಫಲಾನುಭವಿಗಳ ಅಂಕಿ-ಅಂಶಗಳ ಮಾಹಿತಿಯನ್ನು ನೀಡಿದರು.

ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸಾರಿಗೆ ಸೇವೆ ಒದಗಿಸಲು ಹೆಚ್ಚುವರಿ ಬಸ್‍ಗಳ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬೇಡಿಕೆಗೆ ಅನುಗುಣವಾಗಿ ಬಸ್ ಮಾರ್ಗಗಳನ್ನು ಹೊಂದಾಣಿಕೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಲಾಯಿತು.

ಗೃಹಲಕ್ಷ್ಮಿ ಯೋಜನೆ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಇತ್ತೀಚಿನ ದಿನಗಳಲ್ಲಿ ಕೆಲ ಫಲಾನುಭವಿಗಳಿಗೆ ?2 ಸಾವಿರ ಹಣ ಜಮೆಯಾಗದಿರುವುದು ಜಿಎಸ್‍ಟಿ ಸಂಬಂಧಿತ ಸಮಸ್ಯೆಯಿಂದಾಗಿದೆ. ಇದು ಸರ್ಕಾರದ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಯಾಗಿದ್ದು, ಹಂತಹಂತವಾಗಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಯುವನಿಧಿ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳ ನೋಂದಣಿಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದ್ದು, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಯೋಜನೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಮಿತಿಯ ಎಲ್ಲ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಾಘವೇಂದ್ರ ಗುತ್ತೇದಾರ ಹೇಳಿದರು.

ತಾ.ಪಂ. ಇಒ ಬಸಲಿಂಗಪ್ಪ ಡಿಗ್ಗಿ, ಜೆಸ್ಕಾಂ ಎಇಇ ಇಲಿಯಾಸ್ ಅಹಮ್ಮದ್, ಜೆ.ಡಿ. ದೊಡ್ಡಮನಿ, ರಾಹುಲ್, ಚಂದ್ರಕಲಾ, ಸವಿತಾ, ಶ್ರೀದೇವಿ, ಪಂಚ ಗ್ಯಾರಂಟಿ ಸಮಿತಿ ಸದಸ್ಯರಾದ ಕಲ್ಯಾಣರಾವ ಡೊಣ್ಣೂರ, ಗುಡುಸಾಬ್ ಮಾಸ್ಟರ್, ದಿನೇಶ್ ಆರ್. ತಳವಾರ, ಶಿವಶರಣಪ್ಪ ಸೌಕಾರ, ಜಗನ್ನಾಥ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.