
ದೆವನಹಳ್ಳಿ, ನ. ೨೨- ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ರಂಗನಾಥ್ ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಗಂಗವಾರ ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲೆಯ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತಾಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವುದು, ಅಧಿಕಾರಿಗಳೇ ಜನರ ಬಳಿಗೆ ತೆರಳಿ ಅವರ ಕಷ್ಟಗಳನ್ನು ಆಲಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಪ್ರತ್ಯೇಕವಾಗಿ ಸ್ಥಾಪಿಸಿದೆ. ಪ್ರತಿ ವಾರ ಪ್ರಜಾ ಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಜನರ ಕಷ್ಟಗಳಿಗೆ ಸ್ಪಂದಿಸುವ, ಪರಿಹಾರ ಒದಗಿಸುವುದು ಪ್ರಜಾ ಸೇವಾ ಆಂದೋಲನದ ಮುಖ್ಯ ಉದ್ದೇಶ ಎಂದರು.
ಈ ಭಾಗದಲ್ಲಿ ಜನತಾ ಕಾಲೋನಿಯಲ್ಲಿ ಮನೆಗಳಿಗೆ ಹಕ್ಕು ಪತ್ರ ವಿತರಣೆ, ಕೆಲ ವರ್ಷಗಳಿಂದ ಮನೆಯ ನಿರ್ಮಾಣವನ್ನೇ ನಡೆಸಿ ವಾಸವಾಗುತ್ತಿರುವವರು ಹಕ್ಕು ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಅದಕ್ಕೆ ಕಾಲಾವಕಾಶ ಬೇಕು. ಕಾನೂನು ಚೌಕಟ್ಟಿನಲ್ಲಿ ಅಹವಾಲುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಗ್ಯಾರಂಟಿ ಯೋಜನೆ ಅನುಷ್ಠಾನ ಅಂಗವಾಗಿ ಗ್ರಾಮೀಣ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ಸ್ವೀಕೃತಿ ವಿತರಣೆ ಅಭಿಯಾನ ಮಳಿಗೆಯನ್ನು ತೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಹಶೀಲ್ದಾರ್ ಅನಿಲ್, ಇಒ ಮುನಿರಾಜು, ಗ್ರೇಡ್ ೨ ತಹಶೀಲ್ದಾರ್ ಜಯಕುಮಾರ್, ಯೋಜನಾ ನಿರ್ದೇಶಕ ರಮೇಶ್, ಪಿಡಿಒ ಶ್ರೀನಿವಾಸ್, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.























