
ಚಿಕ್ಕಬಳ್ಳಾಪುರ.ಸೆ೧: ಕಂದಾಯ ಇಲಾಖೆ ಸಂಬಂಧಿಸಿದಂತೆ ಇ-ಪೌತಿ, ಕಂದಾಯ ಗ್ರಾಮಗಳ ರಚನೆ- ಹಕ್ಕುಪತ್ರ ವಿತರಣೆ, ದರಖಾಸ್ತು ಪೋಡಿ, ಕುಡಿಯುವ ನೀರಿನ ಸರಬರಾಜು, ಮೇವಿನ ಸ್ಥಿತಿಗತಿ ಬಗ್ಗೆ ಹಾಗೂ ಇನ್ನೀತರೆ ಕಂದಾಯ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಭು ಜಿ ರವರು ಸಭೆಯನ್ನು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸದರಿ ಸಭೆಯಲ್ಲಿ ಇ-ಪೌತಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾನೂನುಬದ್ಧ ವಾರಸ್ಸುದಾರರಿಗೆ ನಿಯಮಾನುಸಾರ ಖಾತೆ ಮಾಡಲು, ಕಂದಾಯ ಗ್ರಾಮಗಳಿಗೆ ಸಂಬಂಧಿಸಿದಂತೆ ಶೀಘ್ರವಾಗಿ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು.
ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಉದ್ಭವಾಗದಂತೆ, ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುದ್ಧೀಕರಣ ಮಾಡಲು ಹಾಗೂ ಮೇವಿನ ಲಭ್ಯತೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು /ಮುಖ್ಯಾಧಿಕಾರಿಗಳು ಜಂಟಿಯಾಗಿ ಕಾಲಕಾಲಕ್ಕೆ ತಮ್ಮ ವ್ಯಾಪ್ತಿಯ ಕ್ಷೇತ್ರಗಳಿಗೆ ಪರಿಶೀಲನೆ ಮಾಡಿ, ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ಸಾರ್ವಜನಿಕರಿಗೆ ಅನುವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು / ಮುಖ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿ / ಸಿಬ್ಬಂದಿ ವರ್ಗದವರು ಹಾಜರಿದ್ದರು.































