Home ಜಿಲ್ಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ಧಾರವಾಡ,ಆ೭: ಮತದಾರರ ಪಟ್ಟಿಯಲ್ಲಿ ಹೆಸರು, ತಂದೆ, ಗಂಡನ ಹೆಸರು, ವಯಸ್ಸು, ಫೋಟೊ ವಿವರಗಳು ತಪ್ಪಿದ್ದರೆ ತಿದ್ದುಪಡಿ ಮಾಡಲು ಹಾಗೂ ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾದರೆ ಹೊಸ ಮತಗಟ್ಟೆಗೆ ಸ್ಥಳಾಂತರ ಮಾಡಲು ನಮೂನೆ ೮ ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.


ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಪ್ರಗತಿ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.


ಹೊಸ ಮತದಾರರ ಗುರುತಿನ ಚೀಟಿ ಪಡೆಯಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ, ಹೆಸರು ಸೇರಿಸಿಕೊಳ್ಳಲು ನಮೂನೆ ೬ ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಮರಣ ಹೊಂದಿರುವವರ ಮಾಹಿತಿಯನ್ನು ಕುಟುಬಂದವರು ಬಿಎಲ್‌ಓ ಗಳಿಗೆ ನೀಡಬೇಕು. ಮಾಹಿತಿ ನೀಡದಿದ್ದಲ್ಲಿ, ಪಂಚನಾಮೆಯ ಮೂಲಕ ಹೆಸರನ್ನು ತೆಗೆದುಹಾಕಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಎಲ್ಲ ಸದಸ್ಯರ ಕ್ರಮ ಸಂಖ್ಯೆ ಅನುಕ್ರಮವಾಗಿರುವಂತೆ ಕ್ರಮವಹಿಸಲು ಮತದಾರರ ನೊಂದಣಾಧಿಕಾರಿಗಳಿಗೆ ತಿಳಿಸಿದರು.


ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಎಲ್ಲ ಅಧಿಕಾರಿಗಳು ಸಮಪರ್ಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ ಪಕ್ಷಗಳ ಮುಖಂಡರು ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಯಾವುದೇ ಸಮಸ್ಯೆಗಳು ಇದ್ದಲ್ಲಿ, ದೂರುಗಳು ಇದ್ದಲ್ಲಿ ಜಿಲ್ಲಾಡಳಿತಕ್ಕೆ ಲಿಖಿತ ಪತ್ರಗಳ ಮೂಲಕ ದೂರುಗಳನ್ನು ಸಲ್ಲಿಸಬೇಕು. ಜಿಲ್ಲಾಡಳಿತವು ಶೀಘ್ರವೇ ಮಾಹಿತಿಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು.


ಜಿಲ್ಲೆಯಲ್ಲಿ ಜರುಗುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸುವ್ಯವಸ್ಥಿತವಾಗಿ ಜರುಗಿಸುವ ಕುರಿತು ಎಲ್ಲ ರಾಜಕೀಯ ಪಕ್ಷಗಳ, ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಎಸ್.ಘಾಳಿ ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿಗಳು, ಎಲ್ಲ ರಾಜಕೀಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.