
ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಆಚರಿಸಲಾಯಿತು.ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಇಡೀ ದೇಶ ಸ್ವಾತಂತ್ರ‍್ಯ ಪಡೆದಿದ್ದರೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮಾತ್ರ ಹೈದರಾಬಾದ್ ನಿಜಾಮನ ಆಳ್ವಿಕೆಗೆ ಒಳಪಟ್ಟಿದ್ದವು. ಈ ಐತಿಹಾಸಿಕ ವಿಮೋಚನೆಯ ಹಿಂದೆ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಢ ನಿರ್ಧಾರ ಹಾಗೂ ದೂರದೃಷ್ಟಿಯ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ. ಅವರ ಪ್ರಯತ್ನದ ಫಲವಾಗಿ ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟದಲ್ಲಿ ವಿಲೀನಗೊಂಡು, ಈ ಪ್ರದೇಶದ ಜನರಿಗೆ ಸ್ವಾತಂತ್ರ‍್ಯ ದೊರೆಯಿತು ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಅನೇಕ ಹೋರಾಟಗಾರರ ತ್ಯಾಗವನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ದೃಢವಾಗಿ ಸಾಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣ, ಉದ್ಯೋಗ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಈ ಭಾಗದ ಪ್ರಗತಿಗೆ ಮುನ್ನುಡಿ ಬರೆಯಬೇಕು ಎಂದು ಅವರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಹನುಮಂತ ಪಿ., ಮಹೇಶ್ ಗಣೇರ್, ದೇವರಾಜ ನಾಯಕ ವರ್ಕನಹಳ್ಳಿ, ಸುಧೀರ್ ಕೋಟೆ, ಬೀರಲಿಂಗಪ್ಪ ಕಿಲ್ಲನಕೇರಾ, ನಾಗರಾಜ ಬೀರನೂರು, ಆಂಜನೇಯ ದೇವರಮನೆ ಹಾಗೂ ರಾಜೇಂದ್ರ ಕಲಾಲ್ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.


























