
ಬೀದರ, ಮಾ.15:ಬೀದರ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶನಿವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಭೇಟಿ ನೀಡಿ ಪರಿಶೀಲಸಿದರು.
ನಂತರ ಮಾತನಾಡಿ, ಜಿಲ್ಲಾ ಸಂಕೀರ್ಣ ಕಟ್ಟಡವು 48 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ನಗರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಒಂದೇ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಸುಲಭವಾಗಿ ಹಾಗೂ ವೇಗವಾಗಿ ಸೇವೆಗಳು ದೊರೆಯುವಂತೆ ಈ ಜಿಲ್ಲಾ ಸಂಕೀರ್ಣ ನಿರ್ಮಾಣವಾಗುತ್ತಿದೆ. ಇದು ಬೀದರ ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಸಹಾಯಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.



























