
ಕಲಬುರಗಿ,ಮೇ 27: ರಾಜ್ಯ ಸಚಿವ ಸಂಪುಟದ ಅರಣ್ಯ, ಪರಿಸರ ಮತ್ತು ಜೀವ ವಿಜ್ಞಾನ ಖಾತೆ ಸಚಿವ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕೆಂದು ಕಲಬುರಗಿ ಚವದಾಪುರಿ ಹಿರೇಮಠದ ಡಾ.ರಾಜಶೇಖರ ಶಿವಾಚಾರ್ಯರು ಸಲಹೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಮುನ್ನಡೆಸುತ್ತಿರುವ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿರುವುದಷ್ಟೇ ಅಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಲಭಿಸುವಲ್ಲಿ ಈ ಸಮುದಾಯ ಒಗ್ಗಟ್ಟು ಪ್ರದರ್ಶಿಸುವಲ್ಲಿ ಈಶ್ವರ ಖಂಡ್ರೆಯವರು ತೋರಿದ ಮುತುವರ್ಜಿಯನ್ನು ಪ್ರಧಾನವಾಗಿ ಗಮನದಲ್ಲಿಟ್ಟುಕೊಂಡು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಶ್ರೀಗಳು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅರಣ್ಯ, ಪರಿಸರ ಮತ್ತು ಜೀವ ವಿಜ್ಞಾನ ಖಾತೆಯನ್ನು ಖಂಡ್ರೆ ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಹಾಗಾಗಿ, ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿರುವ ಡಿ.ಕೆ.ಶಿವಕುಮಾರ ಅವರು ತಮ್ಮ ಸಂಪುಟದಲ್ಲಿ ಈಶ್ವರ ಖಂಡ್ರೆಯವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಚವದಾಪುರಿ ಶ್ರೀಗಳು ಕಿವಿಮಾತು ಹೇಳಿದ್ದಾರೆ.























