Home ಜಿಲ್ಲೆ ಕಲಬುರಗಿ ಬರಪರಿಹಾರ ಬಿಡುಗಡೆಗೆ ಆಗ್ರಹಿಸಿ ಶಾಸಕ ಬಿ.ಆರ್.ಪಾಟೀಲ್ ಧರಣಿ

ಬರಪರಿಹಾರ ಬಿಡುಗಡೆಗೆ ಆಗ್ರಹಿಸಿ ಶಾಸಕ ಬಿ.ಆರ್.ಪಾಟೀಲ್ ಧರಣಿ

ಕಲಬುರಗಿ,ನ 11: ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಅಳಂದ ಶಾಸಕ ಬಿ.ಆರ್. ಪಾಟೀಲ್ ಅವರು ಇಂದು ನಗರದ ಮಹಾತ್ಮ ಗಾಂಧಿ ಪ್ರತಿಮೆ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು
ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದ್ದು, ಸರ್ಕಾರವು 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಬರದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರವು ಕೇಂದ್ರಕ್ಕೆ 22,400 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದೆ. ಆದರೆ, ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಗಮನ ಸೆಳೆದು ರಾಜ್ಯದ ರೈತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಧರಣಿ ನಡೆಸಲಾಗುತ್ತಿದೆ ಎಂದರು.
ಧರಣಿಯಲ್ಲಿ ಕೇದಾರಲಿಂಗಯ್ಯ ಹಿರೇಮಠ ,ಸೋಮಶೇಖರ ಗೋನಾಯಕ,ಶರಣಬಸಪ್ಪ ಮಮಶೆಟ್ಟಿಸೈಯದ್ ಮಜರ್ ಹುಸೇನ್,ರೇವಣಸಿದ್ದಪ್ಪ ಸಾತನೂರ,ಉಮಾಪತಿ ಪಾಟೀಲ,ಎಂ.ಆರ್ ಸಜ್ಜನ,ರಮೇಶ ಧುತ್ತರಗಿ,ಶರಣಗೌಡ ಪಾಟೀಲ,ರಾಜೇಂದ್ರಪ್ಪ ಥಂಬೆ,ಧರ್ಮರಾಜ ಸಾಹು,ಗುರುಶರಣ ಪಾಟೀಲ,ರಾಜಶೇಖರ ಪಾಟೀಲ ಅವರು ಸೇರಿದಂತೆ ಅನೇಕ ರೈತ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರು.


ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ
ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು ಹಾಗೂ ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಸೂಕ್ತ ಪರಿಹಾರ ಒದಗಿಸಬೇಕು.
ಕೇಂದ್ರ ಸರಕಾರ ರಾಜ್ಯದ ಮನವಿಗೆ ಸ್ಪಂದಿಸದಿದ್ದರೆ ಎಲ್ಲ ಪಕ್ಷಗಳ ಶಾಸಕರು ಒಗ್ಗೂಡಿ ದಿಲ್ಲಿಗೆ ತೆರಳಿ ಸಂಸತ್ ಎದುರು ಪ್ರತಿಭಟನೆ ನಡೆಸಬೇಕು ಎಂದು ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿzರು.
ನಗರದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಬರ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ರೈತರ ಸಂಕಷ್ಟಕ್ಕೆ ಧ್ವನಿಯಾಗಲು ನಾವು ಇಲ್ಲಿ ಸೇರಿದ್ದೇವೆ. ಇದು ಯಾವುದೇ ವೈಯಕ್ತಿಕ ಸ್ವಾರ್ಥ, ಲಾಭ ಅಥವಾ ಪ್ರಚಾರಕ್ಕಾಗಿ ನಡೆಸುತ್ತಿರುವ ಹೋರಾಟವಲ್ಲ. ಗ್ರಾಮೀಣ ಪ್ರದೇಶಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಸರ್ಕಾರಗಳ ಗಮನಕ್ಕೆ ತರುವ ಉದ್ದೇಶದಿಂದ ಧರಣಿ ನಡೆಸಲಾಗುತ್ತಿದೆ ಎಂದರು.