Home ಜಿಲ್ಲೆ ಸುಗಮ ಸಂಚಾರಕ್ಕೆ ಗುಣಮಟ್ಟದ ರಸ್ತೆ ಕಾಮಗಾರಿಗೆ ಶಾಸಕ ತುನ್ನೂರ ಕಟ್ಟುನಿಟ್ಟಿನ ಸೂಚನೆ

ಸುಗಮ ಸಂಚಾರಕ್ಕೆ ಗುಣಮಟ್ಟದ ರಸ್ತೆ ಕಾಮಗಾರಿಗೆ ಶಾಸಕ ತುನ್ನೂರ ಕಟ್ಟುನಿಟ್ಟಿನ ಸೂಚನೆ

ಯಾದಗಿರಿ: ಮಾ.೮:ಜಿಲ್ಲೆಯ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕೈಗೊಳ್ಳಲಾಗುತ್ತಿರುವ ರಸ್ತೆ ಮರುಡಾಂಬರಿಕರಣ ಕಾಮಗಾರಿಯನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಶಾಸ್ತ್ರಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಲೊಕೋಪಯೋಗಿ ಇಲಾಖೆಯ ವತಿಯಿಂದ ನಡೆಯುತ್ತಿರುವ ರಸ್ತೆ ಮರುಡಾಂಬರಿಕರಣ ಕಾಮಗಾರಿಯನ್ನು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕಾಮಗಾರಿ ಪ್ರಗತಿಯನ್ನು ಸಮಗ್ರವಾಗಿ ಅವಲೋಕಿಸಿದರು. ಈ ವೇಳೆ ಮಾತನಾಡಿದ ಅವರು, ಯಾದಗಿರಿ ನಗರದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಹಿಂದೆ ವಡಗೇರಾ ಕ್ರಾಸ್‌ನಿಂದ ನೇತಾಜಿ ವೃತ್ತದವರೆಗೆ ಸುಮಾರು ೧೦ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿತ್ತು. ಅದೇ ಯೋಜನೆಯಡಿ ಅಭಿವೃದ್ಧಿಗೊಂಡ ರಾಜ್ಯ ಹೆದ್ದಾರಿ ರಸ್ತೆ ಜಿಲ್ಲಾ ಕೇಂದ್ರದ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಪ್ರತಿದಿನ ಸಹಸ್ರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಆದ್ದರಿಂದ ಕಾಮಗಾರಿಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ, ಉತ್ತಮ ಗುಣಮಟ್ಟದ ವಸ್ತುಗಳನ್ನು ಬಳಸಿ ಕೆಲಸ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ಸಹಕಾರದೊಂದಿಗೆ ಹಲವು ಮಹತ್ವದ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ಗುಣಮಟ್ಟದ ಕಾಮಗಾರಿ ನಡೆದರೆ ಮಾತ್ರ ರಸ್ತೆ ದೀರ್ಘಕಾಲ ಬಾಳಿಕೆ ಬಂದು ಜನರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ತುನ್ನೂರ ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಸುರೇಶ ಮಡ್ಡಿ, ಶಾಮಸನ್ ಮಾಳಿಕೇರಿ, ಹಣಮಂತ ಮಡ್ಡಿ, ಮರೆಪ್ಪ ಬಿಳ್ಹಾರ, ಸಾಯಿಬಣ್ಣ ಕೆಂಗುರಿ, ಚಂದ್ರುಗೌಡ ಕಂದಳ್ಳಿ, ತಿಮ್ಮಣ್ಣ ಹೆಡಗಿಮದ್ರಿ, ಜಲಾಲ್ ಪಟೇಲ್ ಬಬುಲಾದ್ ಸೇರಿದಂತೆ ಅನೇಕ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನಗರದ ಪ್ರಮುಖ ರಸ್ತೆಗಳಿಗೆ ಮರುಜೀವ ನೀಡುವ ಈ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.