
ಮುದ್ದೇಬಿಹಾಳ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಶಾಸಕಾಂಗ ವ್ಯವಸ್ಥೆ ಹಾಗೂ ಸಂವಿಧಾನದ ಆಶಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಯುವ ಸಂಸತ್ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಹೇಳಿದರು.
ಪಟ್ಟಣದ ಶಾ ಎಸ್.ಪಿ. ಓಸ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಸಕಾಂಗ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಯುವ ಸಂಸತ್ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಕಾರ್ಯವೈಖರಿ, ಜನಪ್ರತಿನಿಧಿಗಳ ಜವಾಬ್ದಾರಿ ಹಾಗೂ ಸಾರ್ವಜನಿಕ ಆಡಳಿತದ ಕುರಿತು ತಿಳಿದುಕೊಳ್ಳಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಮೂಲಕ ಭವಿಷ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಮಾಲಗತ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಮಾತನಾಡಿ, ಯುವ ಸಂಸತ್ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆ ಮತ್ತು ವಿಧಾನಮಂಡಲದ ಕಾರ್ಯಕಲಾಪಗಳು, ಚರ್ಚೆಗಳು ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳ ಕುರಿತು ಅರಿವು ಪಡೆಯಬೇಕು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ವಾಕ್ಚಾತುರ್ಯ, ವಿಚಾರ ಮಂಡಿಸುವ ಸಾಮರ್ಥ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ. ವಿದ್ಯಾರ್ಥಿಗಳು ಈ ಅನುಭವವನ್ನು ಬಳಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಡಲಗೇರಿ ವಸತಿಯುಕ್ತ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಲ್. ಪಾಟೀಲ, ಪ್ರಾಚಾರ್ಯ ಎಚ್.ಟಿ. ಕಟಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.




















