ಯುದ್ಧ ನಿಲ್ಲಿಸಲು ನೆತನ್ಯಾಹುಗೆ ಮೋದಿ ಮನವಿ

ನವದೆಹಲಿ, ಮಾ.,೨- ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಿರುವ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ದೂರವಾಣಿ ಕರೆ ಮಾಡಿ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಭಾಷಣೆಯಲ್ಲಿ ನಾಗರಿಕರ ಸುರಕ್ಷತೆಯ ಬಗ್ಗೆ ಒತ್ತಿ ಹೇಳಿ, ಯುದ್ಧವನ್ನು ಆದಷ್ಟು ಬೇಗ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ , “ಸದ್ಯದ ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ, ಜೊತೆಗೆ ಬೇಗನೇ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದೆ” ಎಂದು ಹೇಳಿದ್ದಾರೆ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ಮಧ್ಯದ ಯುದ್ಧದಿಂದಾಗಿ ಭೌಗೋಳಿಕ ರಾಜಕೀಯ ಅನಿಶ್ಚಿತತೆ ಮತ್ತು ಜಾಗತಿಕ ಭದ್ರತಾ ಆತಂಕ ಮೂಡಿರುವ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬೆಂಜಮಿನ್ ನೆತನ್ಯಾಹು ಸಂಭಾಷಣೆ ನಡೆದಿದೆ. ಸ್ಥಿರತೆ ಪುನಃಸ್ಥಾಪಿಸಲು ನಿರಂತರವಾಗಿ ಸಂಯಮ, ಸಂವಾದ ಮತ್ತು ರಾಜತಾಂತ್ರಿಕತೆಗೆ ಭಾರತ ಕರೆ ನೀಡಿದೆ.

ರಾಜಸ್ಥಾನ, ಗುಜರಾತ್, ತಮಿಳುನಾಡು ಮತ್ತು ಪುದುಚೇರಿಗಳ ಎರಡು ದಿನಗಳ ಪ್ರವಾಸದಿಂದ ಹಿಂದಿರುಗಿದ ನಂತರ ಪ್ರಧಾನಿ ಮೋದಿ ಅವರು ನವದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೇರಿದಂತೆ ಹಿರಿಯ ಸಚಿವರು ಮತ್ತು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಮೆರಿಕ ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಗಲ್ಫ್ ರಾಷ್ಟ್ರದ ಮೇಲಿನ ಇರಾನ್ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಭಾನುವಾರ ರಾತ್ರಿ ಕರೆ ಮಾಡಿ, ಸಂಕಷ್ಟದ ಸಮಯದಲ್ಲಿ ನಿಮ್ಮೊಂದಿಗೆ ಭಾರತ ನಿಲ್ಲಲಿದೆ ಎಂದು ತಿಳಿಸಿದ್ದಾರೆ.