
ಬೆಂಗಳೂರು, ನ. ೧೧- ಬಹಳ ವರ್ಷಗಳಿಂದ ಬೆಂಗಳೂರಿಗರು ಕಾಯುತ್ತಿದ್ದ ನಮ್ಮ ಮೆಟ್ರೋದ ಪಿಂಕ್ ಲೈನ್ನ ಮೊದಲ ಹಂತ ಇದೇ ನವೆಂಬರ್ ೧೩ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದ್ದು, ನವೆಂಬರ್ ೧೪ರಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳೇನ ಅಗ್ರಹಾರದಿಂದ ತಾವರೆಕೆರೆ (ಸಿದ್ದಗುಂಟೆಪಾಳ್ಯ) ವರೆಗಿನ ಸುಮಾರು ೭.೫ ಕಿ.ಮೀ. ಉದ್ದದ ಎಲಿವೇಟೆಡ್ ಮಾರ್ಗ ಈ ಹಂತದಲ್ಲಿ ಕಾರ್ಯಾರಂಭ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಸಮ್ಮುಖದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ ೬ ಗಂಟೆಯಿಂದಲೇ ಮೆಟ್ರೋ ಸೇವೆ ಆರಂಭವಾಗಲಿದೆ ಎಂದರು.
ಈ ಮಾರ್ಗದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂ-ಬಿ (ಬಿಳೇಕಹಳ್ಳಿ), ಜೆ.ಪಿ.ನಗರ ೪ನೇ ಹಂತ, ಜಯದೇವ ಆಸ್ಪತ್ರೆ ಹಾಗೂ ತಾವರೆಕೆರೆ ಸೇರಿದಂತೆ ಪ್ರಮುಖ ನಿಲ್ದಾಣಗಳು ಕಾರ್ಯಾರಂಭ ಮಾಡಲಿವೆ. ಜಯದೇವ ಆಸ್ಪತ್ರೆ ನಿಲ್ದಾಣದಲ್ಲಿ ಇಂಟರ್ಚೇಂಜ್ ಸೌಲಭ್ಯವಿದ್ದು, ಸಿಲ್ಕ್ ಬೋರ್ಡ್ ಸಂಪರ್ಕದ ಮೂಲಕ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ವಿವಿಧ ಭಾಗಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ. ಬನ್ನೇರುಘಟ್ಟ ರಸ್ತೆ, ಜಯನಗರ ಸೇರಿದಂತೆ ಹಲವು ಪ್ರದೇಶಗಳ ಪ್ರಯಾಣಿಕರಿಗೆ ಈ ಮಾರ್ಗ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.
ಆರಂಭದಲ್ಲಿ ಪ್ರತಿ ಎಂಟು ನಿಮಿಷಕ್ಕೊಂದು ರೈಲು ಸಂಚರಿಸಲಿದೆ. ನಾಲ್ಕು ರೈಲುಗಳು ನಿರಂತರ ಸೇವೆ ನೀಡಲಿದ್ದು, ಒಂದು ರೈಲನ್ನು ಮೀಸಲು ಇಡಲಾಗುತ್ತದೆ. ಸಿಗ್ನಲಿಂಗ್ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯಗತಗೊಂಡ ಬಳಿಕ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ರೈಲುಗಳ ನಡುವಿನ ಅಂತರವನ್ನು ಮತ್ತಷ್ಟು ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.
ಪಿಂಕ್ ಲೈನ್ನ ಈ ಹಂತದ ಕಾರ್ಯಾರಂಭದೊಂದಿಗೆ ಬೆಂಗಳೂರಿನ ಮೆಟ್ರೋ ಜಾಲ ೧೦೦ ಕಿ.ಮೀ. ಗಡಿ ತಲುಪಲಿದೆ. ಮುಂದಿನ ಒಂದೂವರೆ ವರ್ಷದಲ್ಲಿ ಒಟ್ಟು ೧೭೦ ಕಿ.ಮೀ. ಮೆಟ್ರೋ ಮಾರ್ಗವನ್ನು ಕಾರ್ಯಗತಗೊಳಿಸುವ ಗುರಿ ಹೊಂದಲಾಗಿದೆ. ಮುಂದಿನ ವರ್ಷ ಬ್ಲೂ ಲೈನ್ನ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರಂವರೆಗಿನ ೧೯.೭ ಕಿ.ಮೀ. ಮಾರ್ಗವೂ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ. ಹೆಬ್ಬಾಳದಿಂದ ವಿಮಾನ ನಿಲ್ದಾಣ ಹಾಗೂ ಕೆ.ಆರ್.ಪುರಂನಿಂದ ಹೆಬ್ಬಾಳ ಸಂಪರ್ಕಿಸುವ ಮಾರ್ಗಗಳ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದರು.
ಜೆ.ಪಿ.ನಗರ ೪ನೇ ಹಂತದಿಂದ ಹೆಬ್ಬಾಳದವರೆಗೆ ಸಂಪರ್ಕ ಕಲ್ಪಿಸುವ ಆರೆಂಜ್ ಲೈನ್ ಯೋಜನೆಗೆ ಮುಂದಿನ ಆರು ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ.೫೦ರಷ್ಟು ಬಂಡವಾಳ ಹೂಡಿಕೆ ಮಾಡುತ್ತವೆ ಎಂದು ಹೇಳಲಾಗುತ್ತಿದ್ದರೂ, ವಾಸ್ತವದಲ್ಲಿ ಯೋಜನೆಯ ಶೇ.೮೧ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಇದರ ಜತೆಗೆ ಮೆಟ್ರೋ ಕಾರ್ಯಾಚರಣೆಯಿಂದ ಉಂಟಾಗುವ ನಷ್ಟವನ್ನೂ ರಾಜ್ಯ ಸರ್ಕಾರವೇ ಭರಿಸಬೇಕಾಗಿದೆ. ಈ ಅಸಮಾನತೆಯನ್ನು ಸರಿಪಡಿಸಿ ಕೇಂದ್ರ ಸರ್ಕಾರ ತನ್ನ ಹೂಡಿಕೆಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ದೇಶದ ವಿವಿಧ ಭಾಗಗಳಿಂದ ಬಂದ ಕಂಪನಿಗಳಿಗೆ ಆಶ್ರಯ ತಾಣವಾಗಿದ್ದು, ಇಲ್ಲಿ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಮತ್ತು ಆರ್ಥಿಕ ಚಟುವಟಿಕೆಗಳು ನಡೆಯುತ್ತಿವೆ. ನಗರದ ಬೆಳವಣಿಗೆ ಹಾಗೂ ದೇಶದ ಆರ್ಥಿಕತೆಗೆ ಬೆಂಗಳೂರಿನ ಕೊಡುಗೆಯನ್ನು ಪರಿಗಣಿಸಿ ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ಈ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು
























