ಮುಡಾ ಹಗರಣ: ಸಿಎಂ ನಿರಾಳ, ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್

ಬೆಂಗಳೂರು, ಜ.28- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರಿಗೆ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂಗೀಕರಿಸಿದೆ.


ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನಿನ ಮೂಲ ಮಾಲೀಕ ದೇವರಾಜು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಕರಣ ಸಂಬಂಧ ತನಿಖೆ ನಡೆಸಿ ಬಿ. ವರದಿ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರ ಕ್ರಮ ಪ್ರಶ್ನಿಸಿ ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್​ ಅವರು ಈ ಆದೇಶ ನೀಡಿದ್ದಾರೆ.


ಏನಿದು ಪ್ರಕರಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2024ರ ಆಗಸ್ಟ್‌ 8ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.


ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಸೇರಿ ಐವರನ್ನು ಆರೋಪಿಗಳನ್ನಾಗಿಸಲಾಗಿತ್ತು.


ರಾಜ್ಯಪಾಲರು ಸಿದ್ದರಾಮಯ್ಯ ಮತ್ತು ಇತರ ಆರೋಪಿಗಳ ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಜ್ಯಪಾಲರ ನಿರ್ಣಯವನ್ನು ಹೈಕೋರ್ಟ್‌ ಎತ್ತಿ ಹಿಡಿಯುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು.


ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ತನಿಖಾಧಿಕಾರಿ ಬದಲಾವಣೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತ್ತು. ಜತೆಗೆ ಬಿ.ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿತ್ತು.