
ಕಲಬುರಗಿ,ಆ.25: ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಕುರಿತು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಸರ್ಕಾರದ ಗಮನ ಸೆಳೆದಿದ್ದಾರೆ.
ವಿಧಾನ ಪರಿಷತ್ನಲ್ಲಿ ನಮೋಶಿಯವರು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಮಾಹಿತಿಯಂತೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಒಟ್ಟು 7,421 ಉಪನ್ಯಾಸಕ ಹುದ್ದೆಗಳು ಕಾರ್ಯನಿರ್ವಹಿಸುತ್ತಿದ್ದು, 5,490 ಹುದ್ದೆಗಳು ಖಾಲಿ ಇವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪನ್ಯಾಸಕರ ಹುದ್ದೆಗಳು ಗಣನೀಯ ಪ್ರಮಾಣದಲ್ಲಿ ಖಾಲಿ ಇರುವುದರಿಂದ, ಅರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರಿಂದ ಶಿಕ್ಷಕರಿಗೆ ವೃತ್ತಿ ಪ್ರಗತಿಯ ಅವಕಾಶ ದೊರೆಯುವುದರ ಜೊತೆಗೆ ಪದವಿ ಪೂರ್ವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೂ ಅನುಕೂಲವಾಗಲಿದೆ.
ಕಲಬುರಗಿ ಜಿಲ್ಲೆಯಲ್ಲಿ 517 ಹುದ್ದೆಗಳು ಮಂಜೂರಾಗಿದ್ದು, 352 ಹುದ್ದೆಗಳಲ್ಲಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, 165 ಹುದ್ದೆಗಳು ಖಾಲಿ ಇವೆ.
ಕನ್ನಡ, ಇಂಗ್ಲಿಷ್, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ವಾಣಿಜ್ಯ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಉಪನ್ಯಾಸಕ ಹುದ್ದೆಗಳಲ್ಲಿಯೂ ಖಾಲಿ ಹುದ್ದೆಗಳಿರುವುದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದುಬರುತ್ತದೆ.
ಶಿಕ್ಷಕರ ಹಿತಾಸಕ್ತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಹ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂಬುದು ಶಿಕ್ಷಕ ಸಮುದಾಯದ ಪ್ರಮುಖ ನಿರೀಕ್ಷೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅವರು ಸದನದ ಗಮನಕ್ಕೆ ತಂದರು






























