
ಮಾಲೂರು.ಜು.೨೩: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಜೊತೆಗೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಯುವ ಕಾಂಗ್ರೆಸ್ ನಿಂದ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ತನ್ವೀರ್ ಹಾಗೂ ಮಾಸ್ತಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ದೊಡ್ಡಿ ವಸಂತ್ ನೇತೃತ್ವದಲ್ಲಿ ಜಮಾಯಿಸಿ ತಾಲ್ಲೂಕು ಕಚೇರಿವರೆಗೂ ಜಾಥಾ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಾದ್ಯಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ನೀಡುವ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ನಡೆದಿರುವ ಅಕ್ರಮಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನ ಮೂಡಿಸಿವೆ. ಪಾರದರ್ಶಕತೆಯ ಕೊರತೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಪೆಟ್ಟು ಬಿದ್ದಿದೆ .ಆದ್ದರಿಂದ ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.































