
ತುಮಕೂರು, ಜು. ೨೮- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನಗರದ ಟೌನ್ಹಾಲ್ನ ಅಂಬೇಡ್ಕರ್ ಪ್ರತಿಮೆ ಬಳಿ ಮೇಣದ ಬತ್ತಿ ಹಿಡಿದು ಎಸ್ಎಫ್ಐ ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರಕ್ಕೆ ಜನಪರವಾದ ಕಾಳಜಿ ಇಲ್ಲವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಹಲವು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ, ಪ್ರತಿಭಟನೆ ನಡೆಸಿದ್ದರೂ ಸಹ ಕೇಂದ್ರ ಸರ್ಕಾರ ಮೌನವಾಗಿತ್ತು ಎಂದು ದೂರಿದರು.
ದೆಹಲಿ ಸೇರಿದಂತೆ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ನಂತರ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ತೆಗೆದುಕೊಂಡಿತು. ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಮೊದಲನೇ ಜಯವಾಗಿದೆ. ದೇಶಾದ್ಯಂತ ವಿದ್ಯಾರ್ಥಿ-ಯುವ ಜನರು ಜಾಗೃತರಾಗಿದ್ದಾರೆ. ಕೋಮುವಾದಿ ಅಟ್ಟಹಾಸ ನಡೆಯುವುದಿಲ್ಲ ಎಂಬ ಸಂದೇಶವನ್ನು ವಿದ್ಯಾರ್ಥಿಗಳು ನೀಡಿದ್ದಾರೆ. ದೇಶದಲ್ಲಿ ಉಂಟಾಗಿರುವ ಶಿಕ್ಷಣದಲ್ಲಿನ ಭ್ರಷ್ಟಾಚಾರ, ನಿರುದ್ಯೋಗ ವಿದ್ಯಾರ್ಥಿ ಯುವಜನರನ್ನು ಹತಾಶರನ್ನಾಗಿ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದರು.
ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿರುವುದು ಕೇಂದ್ರ ಸರ್ಕಾರದ ವೈಫಲ್ಯವನ್ನು ಸೂಚಿಸುತ್ತದೆ. ಶಿಕ್ಷಣದಲ್ಲಿನ ಭ್ರಷ್ಟಾಚಾರ ಮತ್ತು ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಪ್ರತಿಭಟನೆಗಳು ತೀವ್ರಗೊಂಡಿವೆ. ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ಶಿಕ್ಷಣದ ಭ್ರಷ್ಟಾಚಾರ ಮತ್ತು ನಿರುದ್ಯೋಗಕ್ಕೆ ಸಂಬಂಧಿಸಿದಂತೆ ವಿಶೇಷವಾದ ಸಂಸತ್ ಅಧಿವೇಶನ ಕರೆದು ಚರ್ಚಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳಿಗೆ ತಮ್ಮ ಹಕ್ಕುಗಳನ್ನು ಕೇಳಿದರೆ ದೇಶದ್ರೋಹಿ ಪಟ್ಟ ಕಟ್ಟುವುದು ಅತ್ಯಂತ ಹೀನಾಯವಾದ ಕೃತ್ಯವಾಗಿದೆ. ಬಿಜೆಪಿಯ ಕೋಮುವಾದ ಮತ್ತು ಧಾರ್ಮಿಕ ವಿಚಾರಗಳು ದೇಶದ ವಿದ್ಯಾರ್ಥಿ ಮತ್ತು ಯುವಜನರಿಗೆ ಉದ್ಯೋಗ ಸೃಷ್ಟಿಸಲಾರವು. ಇದನ್ನು ಅವರು ಮನಗಾಣಬೇಕು. ದೇಶದ ಅಭಿವೃದ್ಧಿಗೆ ಶಿಕ್ಷಣ ಮತ್ತು ಉದ್ಯೋಗ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇದುವರೆಗೂ ಪ್ರಧಾನಿಗಳು ದೇಶದ ಶಿಕ್ಷಣ, ಉದ್ಯೋಗ ಮತ್ತು ಆರೋಗ್ಯದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಹುಸಿ ದೇಶಪ್ರೇಮ ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾರದು. ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕಾಯ್ದೆಯನ್ನು ಜಾರಿ ಮಾಡಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಹಾಕಿರುವ ಎಫ್ಐಆರ್ಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಮೆಡಿಕಲ್ ವಿದ್ಯಾರ್ಥಿನಿ ಪೃಥ್ವಿ ಮಾತನಾಡಿ, ನಾನು ನೀಟ್ ಪರೀಕ್ಷೆಯಲ್ಲಿ ಪಾಸಾಗಿ ಡಾಕ್ಟರ್ ಆಗಬೇಕೆಂಬ ಕನಸು ಕಂಡಿದ್ದೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜೀವನದ ಮೇಲೆ ಜಿಗುಪ್ಸೆ ಉಂಟಾಗಿದೆ. ಮುಂದಾದರೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಕ್ರಮ ವಹಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಗಮವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದರು.
ವಿದ್ಯಾರ್ಥಿನಿ ಸೈಮಾ ಸೈಯಾದಿ ಮಾತನಾಡಿ ಪ್ರಧಾನಿಗಳಿಗೆ ವಿದೇಶಕ್ಕೆ ಹೋಗಲು ಸಮಯವಿರುತ್ತದೆ. ನಮ್ಮ ದೇಶದ ವಿದ್ಯಾರ್ಥಿಗಳ ಜತೆ ಐದು ನಿಮಿಷ ಮಾತನಾಡಲು ಸಮಯವಿಲ್ಲವಾಗಿದೆ ಎಂದು ಟೀಕಿಸಿದರು.
ಸಭೆಯಲ್ಲಿ ಗಾನಶ್ರೀ, ನವ್ಯ, ಜಯ, ಪವನ್, ಮಲ್ಲೇಶ್, ಅನ್ನಪೂರ್ಣ ಎನ್, ಜೋಯಾ ಕಮರ್, ಡಿವೈಎಫ್ಐ ಮಂಜುನಾಥ್, ಎಸ್.ರಾಘವೇಂದ್ರ, ಕಲ್ಪನ, ಕಮಲ, ಸಿಂಚನ, ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ, ರಂಗಧಾಮಯ್ಯ, ಲಕ್ಷ್ಮೀಕಾಂತ ಮತ್ತಿತರರು ಭಾಗವಹಿಸಿದ್ದರು.


































