
ಬೆಂಗಳೂರು, ಮೇ ೨- ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸರ್ಕಾರದ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರ ಕಾರ್ಯಕ್ರಮಗಳ ಯೋಜನೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ. ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯಗಳ ಅನುಷ್ಠಾನದಲ್ಲಿ ಲೋಪ ಕಂಡು ಬಂದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದರು.
ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‌ನ ಕಾರ್ಯಕ್ರಮಗಳ ಜಾರಿಗೆ ಸಂಬಂಧಿಸಿದಂತೆ ಆದೇಶಗಳನ್ನು ಹೊರಡಿಸಿ ಜನಪರ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.
ಕಳೆದ ವರ್ಷದ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ಕೆಲ ಯೋಜನೆಗಳನ್ನು ಕೆಲ ಅಧಿಕಾರಿಗಳು ಸಮರ್ಪಕವಾಗಿ ಜಾರಿ ಮಾಡಿಲ್ಲದಿರುವುದಕ್ಕೂ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ರೀತಿಯ ಧೋರಣೆಯನ್ನು ಸಹಿಸುವುದಿಲ್ಲ ಎಂದು ಗುಡುಗಿದರು.
ಯೋಜನೆಗಳ ಜಾರಿಗೆ ಹಣಕಾಸಿನ ಕೊರತೆಯಿದೆ ಎಂಬ ನೆಪ ಹೇಳಿ ಕಾಲ ಹರಣ ಮಾಡಬೇಡಿ. ಬಜೆಟ್‌ನಲ್ಲಿ ಪ್ರಕಟಿಸಲಾಗಿರುವ ಹೊಸ ಯೋಜನೆಗಳಿಗೆ ಹಣಕಾಸನ್ನು ಒದಗಿಸುತ್ತೇವೆ. ಎಲ್ಲಾ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜಾರಿ ಮಾಡುವ ಕೆಲಸ ಮಾಡಿ. ಭ್ರಷ್ಟಾಚಾರಕ್ಕೆ ಆಸ್ಪದ ಕೊಡದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ಕಚೇರಿಗೆ ಬಂದು ಕೆಲಸ ಮಾಡಬೇಕು. ಬೇರೆಡೆ ಕುಳಿತು ಕಡತ ವಿಲೇವಾರಿಗೆ ಮುಂದಾದರೆ ಅದನ್ನು ಸಹಿಸುವುದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೈಪಿಡಿ ಬಿಡುಗಡೆ
ಈ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ಯೋಜನೆಗಳ ಪರಿಶೀಲನೆ, ಅನುಮೋದನೆಗಳು, ಯೋಜನೆಗಳ ಸಮನ್ವಯ ಕುರಿತಂತೆ ನೂತನ ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರುಗಳು ಪಾಲ್ಗೊಂಡಿದ್ದರು.
























